ಕಾರವಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನು ಹೆಚ್ವು ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡಬೇಕು. ಆ ಮೂಲಕ ತಮ್ಮ ಆಯ್ಕೆಯ ಉತ್ತಮ ಜನಪ್ರತಿನಿಧಿಯನ್ನು ಆರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಡಾ.ದಿಲೀಷ್ ಶಶಿ ಅವರು ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ, ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಲಾಗಿದ್ದ “ಪತ್ರ ಅಭಿಯಾನ” ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳ ಮೂಲಕ ಪೋಷಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಕಾರ್ಯದಲ್ಲಿ ಈಗಾಗಲೇ ಬಿ.ಎಲ್.ಓ.ಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಿದ್ದಾರೆ. ಈ ಫಾರಂಗಳನ್ನು ಸರಿಯಾಗಿ ಭರ್ತಿ ಮಾಡಿ, ಸಹಿ ನೀಡಿ, ಕಡ್ಡಾಯವಾಗಿ ಹಿಂದಿರುಗಿಸುವಂತೆ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ಬರೆಯಬೇಕು ಎಂದು ಅವರು ಇದೇ ವೇಳೆ ತಿಳಿಸಿದರು. ಮುಂದುವರಿದು, ಯುವಜನತೆ ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯ. ಹಾಗಾಗಿ 18 ವರ್ಷ ತುಂಬಿರುವ ಎಲ್ಲ ಯುವಕ-ಯುವತಿಯರು ತಪ್ಪದೇ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಅವರು ಎಸ್.ಐ.ಆರ್. (SIR) ಮಹತ್ವದ ಕುರಿತು ಜಾಗೃತಿ ಮೂಡಿಸಿದರು.
ವಸತಿ ನಿಲಯದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಶಿಷ್ಟ ಪತ್ರ ಅಭಿಯಾನದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಪೋಷಕರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಪ್ಪದೇ ಪಾಲ್ಗೊಳ್ಳುವಂತೆ ಕೋರಿ ವಿದ್ಯಾರ್ಥಿಗಳು ಪತ್ರ ಬರೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಹಾಗೂ ವಸತಿ ನಿಲಯದ ಮೇಲ್ವಿಚಾರಕರು (ವಾರ್ಡನ್) ಉಪಸ್ಥಿತರಿದ್ದರು.
