ಯುವತಿಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಮಹಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.
ಯುವತಿಯೊಬ್ಬರು ದಾಂಡೇಲಿ ನಗರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳ ವಿರುದ್ಧ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣದ ಸಮಗ್ರ ತನಿಖೆ ಆರಂಭಿಸಲಾಗಿದೆ.
ಪ್ರಕರಣದ ತನಿಖೆಯ ಭಾಗವಾಗಿ ಕಾರವಾರದಿಂದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ದಾಂಡೇಲಿಗೆ ಭೇಟಿ ನೀಡಿ ಘಟನೆ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿತು. ಸ್ಥಳ ಮಹಜರು ನಡೆಸಿದ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವುದರ ಜೊತೆಗೆ ಸಂಬಂಧಪಟ್ಟವರ ಹೇಳಿಕೆಗಳನ್ನೂ ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಕಾನ್ಸ್ಟೇಬಲ್ ಇಮ್ರಾನ್ ಅವರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ. ಅಗತ್ಯವಿದ್ದಲ್ಲಿ ಅವರ ಧ್ವನಿ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಪರೀಕ್ಷೆಗೆ ಕಳುಹಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಾಥಮಿಕ ಹಂತದಲ್ಲೇ ಮಹಾಂತೇಶ್ ಅವರನ್ನು ಅಮಾನತುಗೊಳಿಸಿರುವ ಪೊಲೀಸ್ ಇಲಾಖೆ, ತನಿಖೆಯನ್ನು ಯಾವುದೇ ಒತ್ತಡವಿಲ್ಲದೆ ನಡೆಸಲು ಮುಂದಾಗಿದೆ. ತನಿಖಾ ವರದಿ ಬಂದ ಬಳಿಕ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನುಬದ್ಧವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಅಂತಿಮ ವರದಿಯೊಂದಿಗೆ ಇನ್ನಷ್ಟು ಮಾಹಿತಿ ಬೆಳಕಿಗೆ ಬರುವ ನಿರೀಕ್ಷೆಯಿದೆ.
