ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಬಸ್ ಮತ್ತು ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾನಗಲ್‌ನಿಂದ ಮುಂಡಗೋಡಿನತ್ತ ಬರುತ್ತಿದ್ದ ಬಸ್‌ಗೆ, ಮುಂಡಗೋಡಿನಿಂದ ಶಿರಸಿಯತ್ತ ತೆರಳುತ್ತಿದ್ದ ಲಾರಿ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಗಂಭೀರವಾಗಿ ಗಾಯಗೊಂಡ ಐವರನ್ನು ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಮುಂಡಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
