ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಶುಲ್ಕ ಮರುಪಾವತಿಗೆ ಅವಕಾಶ!

Pakka News Web • 14 ಜುಲೈ 2026,


ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮತೀಯ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಹಾಗೂ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳನ್ನು ಗಳಿಸಿರಬೇಕು. ಆದಾಯ ಮಿತಿಗೆ ಸಂಬಂಧಿಸಿದಂತೆ, ಸಾಮಾನ್ಯ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರಬೇಕು ಹಾಗೂ ವೃತ್ತಿಪರ ಮತ್ತು ತಾಂತ್ರಿಕ ಕೋರ್ಸ್‌ಗಳ ವಿದ್ಯಾರ್ಥಿಗಳ ಕುಟುಂಬದ ಆದಾಯ 2.5 ಲಕ್ಷ ರೂ. ಮೀರಿರಬಾರದು.
ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://ssp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಮುಖ್ಯವಾಗಿ, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ (NPCI Mapping Active) ಆಗಿರುವುದನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು.
ಈ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ಕಾರವಾರದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 08382-220336 ಹಾಗೂ ಇಲಾಖೆಯ ರಾಜ್ಯ ಸಹಾಯವಾಣಿ 8277799990 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250