ಭಟ್ಕಳ:ತಾಲೂಕಿನಲ್ಲಿ ಶಾಲಾ ವಾಹನಗಳ ಬೇಕಾಬಿಟ್ಟಿ ಸಂಚಾರ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲೇ ಮೊದಲ ಬಾರಿಗೆ ಭಟ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ವಾಹನಗಳ ವಿರುದ್ಧ ವಿಶೇಷ ತಪಾಸಣಾ ಅಭಿಯಾನ ನಡೆಸಿ, ನಿಯಮ ಉಲ್ಲಂಘಿಸಿದ ವಾಹನಗಳಿಗೆ ದಂಡ ವಿಧಿಸಲಾಗಿದೆ.
ಭಟ್ಕಳ ನಗರ ಠಾಣೆಯ ಪಿಎಸ್‌ಐ ನವೀನ್ ನಾಯ್ಕ ಹಾಗೂ ಪಿಎಸ್‌ಐ ತಿಮ್ಮಪ್ಪ ಎಸ್. ಅವರ ಜಂಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿ, ನಗರದ ವಿವಿಧ ಭಾಗಗಳಲ್ಲಿ ಸಂಚರಿಸುತ್ತಿದ್ದ ಶಾಲಾ ವಾಹನಗಳನ್ನು ತಡೆದು ಪರಿಶೀಲಿಸಿದರು. ಈ ತಪಾಸಣೆ ವೇಳೆ ವಾಹನಗಳ ಇನ್ಸುರೆನ್ಸ್ (ವಿಮೆ) ನವೀಕರಣಗೊಳ್ಳದಿರುವುದು ಹಾಗೂ ಸೂಕ್ತ ದಾಖಲೆಗಳು ಇಲ್ಲದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಒಟ್ಟು ಐದು ಶಾಲಾ ವಾಹನಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು.
ವಿದ್ಯಾರ್ಥಿಗಳ ಸುರಕ್ಷತೆಯೇ ನಮಗೆ ಮೊದಲ ಆದ್ಯತೆಯಾಗಿದ್ದು, ಶಾಲಾ ವಾಹನಗಳ ಚಾಲಕರು ಮತ್ತು ಆಡಳಿತ ಮಂಡಳಿಯು ಇನ್ಸುರೆನ್ಸ್ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿಟ್ಟುಕೊಳ್ಳಬೇಕು ಹಾಗೂ ಸಂಚಾರ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ. ನಿಯಮ ಮೀರಿದರೆ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಅಧಿಕಾರಿಗಳು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂಬರುವ ದಿನಗಳಲ್ಲೂ ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
