ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ರೌಡಿಶೀಟರ್ ಮೈಸೂರಿಗೆ ಗಡಿಪಾರು!

Pakka News Web • 2 ಆಗಸ್ಟ್ 2026,

ರೌಡಿ ಚಟುವಟಿಕೆಗಳ ಮೂಲಕ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೆಬಳೆ ಗಾಂಧಿನಗರ ನಿವಾಸಿ ಜಗದೀಶ ವಾಸು ಮೊಗೇರ (33) ಎಂಬಾತನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಕಾಲ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಆರೋಪಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಆರೋಪಿ ಜಗದೀಶ ತನ್ನ ಸಹಚರರೊಂದಿಗೆ ಸೇರಿಕೊಂಡು ಗೂಂಡಾವರ್ತನೆ ತೋರುವುದು, ಸಾರ್ವಜನಿಕರಿಗೆ ಬೆದರಿಕೆ ಹಾಕುವುದು, ಕ್ಷುಲ್ಲಕ ಕಾರಣಗಳಿಗೆ ಹಲ್ಲೆ ನಡೆಸುವುದು ಹಾಗೂ ವಿವಿಧ ಪ್ರಕರಣಗಳ ಸಾಕ್ಷಿದಾರರಿಗೆ ಬೆದರಿಕೆ ಒಡ್ಡುವ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ. ಈತನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಬೆದರಿಕೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ 5 ಪ್ರಕರಣಗಳು ಮತ್ತು ಮುರುಡೇಶ್ವರ ಠಾಣೆಯಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 6 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಇವೆಲ್ಲವೂ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ.

ಈತನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ನಿರೀಕ್ಷಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ)(ಬಿ) ಅಡಿಯಲ್ಲಿ ಈ ಗಡಿಪಾರು ಆದೇಶ ಮಾಡಿದ್ದಾರೆ. ಆದೇಶದನ್ವಯ ಭಟ್ಕಳ ಗ್ರಾಮೀಣ ಪೊಲೀಸರು ಆರೋಪಿಯನ್ನು ಮೈಸೂರಿನ ಅಶೋಕಪುರಂ ಠಾಣೆಯ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250