ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತೊಮ್ಮೆ ಭುಗಿಲೆದ್ದಿದೆ. ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರು ಗೆದ್ದಿದ್ದರೂ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದಿರುವ ಬೇಸರದ ನಡುವೆ, ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಹಾಗೂ ಸಚಿವ ಲಕ್ಷ್ಮಣ ಸವದಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಪ್ರಕೃತಿ ವಿಕೋಪ ಅಧ್ಯಯನದ ಹೊಣೆಗಾರರಾಗಿ ನೇಮಿಸಿರುವುದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಎಲ್ಲ ಜಿಲ್ಲೆಗಳಿಗೆ ಸಚಿವರನ್ನು ನಿಯೋಜಿಸಿರುವ ಸರ್ಕಾರ, ಉತ್ತರ ಕನ್ನಡದ ಜವಾಬ್ದಾರಿಯನ್ನು ಲಕ್ಷ್ಮಣ ಸವದಿ ಅವರಿಗೆ ನೀಡಿದೆ. ಈ ಹಿಂದೆ ಈ ಹೊಣೆಗಾರಿಕೆಯನ್ನು ಯು.ಟಿ. ಖಾದರ್ ಅವರಿಗೆ ನೀಡಲಾಗಿತ್ತು. ಆದರೆ ಆಡಳಿತಾತ್ಮಕ ಕಾರಣಗಳಿಂದ ಜವಾಬ್ದಾರಿ ಬದಲಾಯಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೂ ಜಿಲ್ಲೆಯ ರಾಜಕೀಯ ಮತ್ತು ಭೌಗೋಳಿಕ ಪರಿಸ್ಥಿತಿಯನ್ನು ಅರಿತ ಸ್ಥಳೀಯ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದರ ಜೊತೆಗೆ ಸಚಿವ ಸಂಪುಟ ವಿಸ್ತರಣೆ ವೇಳೆ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಆರಂಭಿಕ ಪಟ್ಟಿಯಲ್ಲಿ ಕಾಣಿಸಿಕೊಂಡು ಬಳಿಕ ಕೈಬಿಟ್ಟ ಬೆಳವಣಿಗೆಯೂ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ಹೆಚ್ಚಿಸಿದೆ. ಹಿರಿಯ ನಾಯಕ ಆರ್. ವಿ. ದೇಶಪಾಂಡೆ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನೂ ಸಚಿವ ಸ್ಥಾನದಿಂದ ದೂರವಿಟ್ಟಿರುವುದಕ್ಕೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಕಾರವಾರದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವಂತೆ ಆಗ್ರಹಿಸಿದ್ದಾರೆ. ನಾಲ್ವರು ಶಾಸಕರಿದ್ದರೂ ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ಅನ್ಯಾಯ ಎಂದು ಅವರು ಆರೋಪಿಸಿದ್ದಾರೆ.
ಇದೀಗ ಲಕ್ಷ್ಮಣ ಸವದಿ ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ ಪ್ರಕೃತಿ ವಿಕೋಪದ ಅಧ್ಯಯನ ಆರಂಭಿಸಲಿದ್ದಾರೆ. ಆದರೆ ಈಗಾಗಲೇ ಉಂಟಾಗಿರುವ ರಾಜಕೀಯ ಅಸಮಾಧಾನದ ನಡುವೆ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ಸಹಕಾರ ಪಡೆಯುವುದು ಅವರಿಗೆ ಸವಾಲಿನ ವಿಷಯವಾಗಲಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ.
