ಕಾರವಾರ: ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜಯಗಳಿಸುವತ್ತ ಕೊಂಡೊಯ್ಯಲು ಇಂದಿನಿಂದಲೇ ಬೂತ್ ಮಟ್ಟದಿಂದ ಸಂಘಟನೆಯನ್ನು ಬಲಪಡಿಸುವುದು ಅಗತ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರೀಶ್ ನಾಯಕ್ ಹೇಳಿದರು.
ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಯೋಜಿಸಲಾಗಿದ್ದ ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಪ್ರತಿಯೊಬ್ಬ ಕಾರ್ಯಕರ್ತರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ಪಕ್ಷದ ಏಳಿಗೆಗಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕಾರಿ ಸಭೆಯ ನಂತರ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಪಂಪ್ ಎದುರುಗಡೆ ಜಾಗೃತಿ ಪೋಸ್ಟರ್ ಅಭಿಯಾನವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಚೈತ್ರ ವಿ. ಗಿರೀಶ್ ಕುಮಾರ್, ರಾಜ್ಯ ಕಾರ್ಯದರ್ಶಿ ಹಾಗೂ ಉಸ್ತುವಾರಿ ಅಭಿನಂದನ್, ರಾಜ್ಯ ಕಾರ್ಯದರ್ಶಿಗಳಾದ ಅಲಿ ಖುರೇಷಿ, ಪವನ್ ನಾಯ್ಕ ಹಾಗೂ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ರಾಜ್ಯ ಸಂಯೋಜಕ ಸೈಯದ್ ಅಶ್ರಫ್ ಖಾದ್ರಿ ಉಪಸ್ಥಿತರಿದ್ದರು.
ಅಲ್ಲದೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಮೋದ ಸಿರ್ಸಿಕರ್, ಉಪಾಧ್ಯಕ್ಷ ಹರೀಶ್ ನಾಯ್ಕ, ಪ್ರಧಾನ ಕಾರ್ಯದರ್ಶಿ ಕಾವ್ಯಾನಂದ ನಾಯ್ಕ್, ಸಿದ್ದಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಕುಮಾರ್ ನಾಯ್ಕ್, ಪ್ರಮುಖರಾದ ಪೂರ್ಣ ನಾಯ್ಕ್, ಜೈಶಿಲ್ ನಾಯ್ಕ್ ಸೇರಿದಂತೆ ಯುವ ಕಾಂಗ್ರೆಸ್ನ ಹಲವಾರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
