ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಸಾಧನೆಗೆ ಅಂಕಗಳಷ್ಟೇ ಸಾಲದು, ವ್ಯಕ್ತಿತ್ವವೂ ಅರಳಬೇಕು!

Pakka News Web • 9 ಆಗಸ್ಟ್ 2026,

ಕಾರವಾರ: ಕೇವಲ ಪರೀಕ್ಷೆಯ ಅಂಕಪಟ್ಟಿ ಜಾಣತನದ ಸಂಕೇತವಾಗಲಾರದು; ಬದಲಿಗೆ ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಧೈರ್ಯವಾಗಿ ಹೆಜ್ಜೆ ಇಡಲು ಸ್ಪಷ್ಟ ಸಂವಹನ ಕೌಶಲ್ಯ, ಆತ್ಮವಿಶ್ವಾಸ ಮತ್ತು ಬಲಿಷ್ಠ ವ್ಯಕ್ತಿತ್ವ ವಿಕಸನ ಅಗತ್ಯ ಎಂದು ಕೆ.ಎಸ್.ಎಂ.ಸಿ.ಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಪ್ರತಿಪಾದಿಸಿದರು.

ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ರವಿವಾರ ಆಯೋಜಿಸಲಾಗಿದ್ದ ಉತ್ತರ ಕನ್ನಡ ಜಿಲ್ಲೆ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪ್ರತಿಭಾವಂತ ಮಕ್ಕಳ ‘ಪ್ರತಿಭಾ ಪುರಸ್ಕಾರ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಂತದಲ್ಲಿ ಸಿಗುವ ಪ್ರತಿಯೊಂದು ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸಂದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜಾಣ್ಮೆಯಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಹತ್ತನೇ ತರಗತಿಯ ನಂತರದ ಆರು ವರ್ಷಗಳ ಕಾಲ ಕಠಿಣ ಪರಿಶ್ರಮ ವಹಿಸಿದರೆ ಭವಿಷ್ಯದ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬಹುದು. ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಸನ್ಮಾರ್ಗದಲ್ಲಿ ನಡೆದು, ಪೋಷಕರು, ಶಿಕ್ಷಣ ಸಂಸ್ಥೆ ಹಾಗೂ ದೇಶಕ್ಕೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು, ವಿವಿಧ ಒತ್ತಡಗಳ ನಡುವೆಯೂ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಬೆಂಬಲವಾಗಿ ನಿಂತ ಪೋಷಕರನ್ನು ಅಭಿನಂದಿಸಿದರು. ಶಿಕ್ಷಣವೇ ಜೀವನದ ಮೂಲ ಅಡಿಪಾಯವಾಗಿದ್ದು, ಭವಿಷ್ಯದ ಸವಾಲುಗಳನ್ನು ಎದುರಿಸಲು ಅಂಕಗಳ ಜತೆಗೆ ಧೈರ್ಯ ಮತ್ತು ವ್ಯಕ್ತಿತ್ವ ವಿಕಸನ ಅಗತ್ಯ. ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಯೂ ಗಮನ ಹರಿಸಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆಯು ನಿರಂತರವಾಗಿ ರಾಜ್ಯದ ಮೊದಲ ಮೂರು ಸ್ಥಾನಗಳಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೇರಿಸಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ ಎಂದರು. ಉತ್ತೀರ್ಣರಾದ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗಳಿಗೆ ಭೇಟಿ ನೀಡಿ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಸಮಾಜಕ್ಕೆ ಮರಳಿ ಕೊಡುಗೆ ನೀಡಬೇಕು ಎಂದು ಆಶಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಸಂಘದಿಂದ ಪ್ರತಿವರ್ಷ ಸುಮಾರು 10 ಸಾವಿರ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಈ ಬಾರಿ ಆಯ್ಕೆ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ಪಾರದರ್ಶಕವಾಗಿ ನಡೆಸಲಾಗಿದೆ. ವಿದ್ಯಾರ್ಥಿಗಳು ಐಎಎಸ್, ಐಪಿಎಸ್, ಕಾರ್ಪೊರೇಟ್, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಗುರಿ ಹೊಂದಬೇಕು. ದೇಶಪ್ರೇಮ, ಭಾಷಾಭಿಮಾನ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಖಾಲಿ ಹುದ್ದೆಗಳ ಭರ್ತಿ, ಹಳೆಯ ಪಿಂಚಣಿ ಯೋಜನೆ ಮರುಜಾರಿ, 8ನೇ ವೇತನ ಆಯೋಗದ ಅಳವಡಿಕೆ ಹಾಗೂ ಉಚಿತ ಆರೋಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿ ಹಾಗೂ ಶೇ 100ರಷ್ಟು ಫಲಿತಾಂಶ ದಾಖಲಿಸಿದ ಶಾಲೆ-ಕಾಲೇಜುಗಳ ಮುಖ್ಯಸ್ಥರನ್ನು ಗೌರವಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಸಂಜೀವಕುಮಾರ ಎಸ್. ನಾಯ್ಕ ಸ್ವಾಗತಿಸಿದರು. ಶಿರಸಿ ಶೈಕ್ಷಣಿಕ ಜಿಲ್ಲೆಯ ವಿಭಾಗೀಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನಾಯ್ಕ, ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ವನಿತಾ ಶೇಟ್ ಹಾಗೂ ವಿಕಾಸ ಕಾರ್ಯಕ್ರಮ ನಿರೂಪಿಸಿದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250