ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಬ್ಯಾಡ್ಮಿಂಟನ್ ಅಂಕಣದಲ್ಲೇ ಶಿಕ್ಷಕ ಸುಬ್ರಮಣ್ಯ ಗೌಡ ನಿಧನ

Pakka News Web • 14 ಆಗಸ್ಟ್ 2026,

ಎಂದಿನಂತೆ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಸಿದ್ದಾಪುರದ ಹಾರ್ಸಿಕಟ್ಟಾ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಹಾಗೂ ಪ್ರತಿಭಾವಂತ ಕ್ರೀಡಾಪಟು ಸುಬ್ರಮಣ್ಯ ಗೌಡ (47) ಅವರು ತೀವ್ರ ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಸಿದ್ದಾಪುರ ಪಟ್ಟಣದ ಅಡಿಕೆ ಭವನದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದ ಸಂದರ್ಭದಲ್ಲಿ ಸುಬ್ರಮಣ್ಯ ಗೌಡ ಅವರು ಹಠಾತ್ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಎಂ.ಎಸ್ಸಿ., ಬಿ.ಎಡ್ ಪದವೀಧರರಾಗಿದ್ದ ಅವರು ಹಾರ್ಸಿಕಟ್ಟಾ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪಾಠ ಬೋಧನೆಯ ಜೊತೆಗೆ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತಿದ್ದ ಅವರು, ಜಿಲ್ಲೆಯ ಕ್ರೀಡಾ ಕ್ಷೇತ್ರದಲ್ಲೂ ಗಮನಾರ್ಹ ಸಾಧನೆ ಮಾಡಿದ್ದರು.

ಕ್ರಿಕೆಟ್‌ನಲ್ಲಿ ಉತ್ತಮ ಆಲ್‌ರೌಂಡರ್ ಆಗಿದ್ದ ಅವರು ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಸಕ್ರಿಯರಾಗಿದ್ದರು. ಇಲಾಖಾ ಮಟ್ಟದ ಕ್ರೀಡಾಕೂಟಗಳಲ್ಲಿ ನಿಯಮಿತವಾಗಿ ಭಾಗವಹಿಸುತ್ತಿದ್ದ ಅವರು, ಹಲವು ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿ ಉತ್ತೇಜನ ನೀಡಿದ್ದರು. ಅವರ ಕ್ರೀಡಾಸಕ್ತಿ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಸುಬ್ರಮಣ್ಯ ಗೌಡ ಅವರ ಹಠಾತ್ ನಿಧನ ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಆಘಾತವನ್ನುಂಟುಮಾಡಿದೆ. ಸರಳ, ಸಜ್ಜನಿಕೆಯ ಶಿಕ್ಷಕರೊಬ್ಬರನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟ ಎಂದು ಸಹೋದ್ಯೋಗಿಗಳು ಹಾಗೂ ಕ್ರೀಡಾಪಟುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ನಾಯಕ ಬಾವಿಕೇರಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕ ವೃಂದದವರು ಸಂತಾಪ ಸೂಚಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250