ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

Pakka News Web • 21 ಆಗಸ್ಟ್ 2026,

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಮ್ಯಾಪಿಂಗ್ ಆಗದ ಹೆಸರುಗಳು ಹಾಗೂ ತಾಳೆಯಾಗದ ವಿವರಗಳ ವಿಚಾರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಅರ್ಹ ಮತದಾರರು ಅಂತಿಮ ಪಟ್ಟಿಯಿಂದ ಹೊರಗುಳಿಯದಂತೆ ಗರಿಷ್ಠ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮ್ಯಾಪಿಂಗ್‌ನಲ್ಲಿ ವ್ಯತ್ಯಾಸವಿರುವ ಹಾಗೂ ಮ್ಯಾಪಿಂಗ್ ಆಗದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತದಾರರಿಗೆ ಬಿ.ಎಲ್.ಓ.ಗಳ ಮೂಲಕ ನೋಟಿಸ್ ನೀಡಿ ವಿಚಾರಣೆ ನಡೆಸಬೇಕು. ನಿಗದಿತ ದಿನದಂದು ಹಾಜರಾಗದವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ ನೋಟಿಸ್ ಜಾರಿಗೊಳಿಸಬೇಕು ಎಂದು ನಿರ್ದೇಶಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಬಿ.ಎಲ್.ಓ.ಗಳ ವರದಿ ಹಾಗೂ ಮತದಾರರು ಒದಗಿಸುವ ಸೂಕ್ತ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಹೊಸ ಸೇರ್ಪಡೆಗೆ ಫಾರಂ-6, ಹೆಸರು ತೆಗೆದುಹಾಕಲು ಫಾರಂ-7 ಹಾಗೂ ತಿದ್ದುಪಡಿ ಅಥವಾ ವಿಳಾಸ ಬದಲಾವಣೆಗಾಗಿ ಫಾರಂ-8 ಗಳನ್ನು ಸ್ವೀಕರಿಸಿ ಆ್ಯಪ್ ಮೂಲಕ ನಿಯಮಾನುಸಾರ ಅಪ್‌ಲೋಡ್ ಮಾಡುವ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಮೃತಪಟ್ಟವರ ಪ್ರಕರಣಗಳಲ್ಲಿ ಮರಣ ಪ್ರಮಾಣಪತ್ರ ಅಥವಾ ಮಹಜರು ಹಾಗೂ ಸ್ಥಳಾಂತರಗೊಂಡ ಪ್ರಕರಣಗಳಲ್ಲಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಮಹಜರು ಸಿದ್ಧಪಡಿಸಬೇಕು. ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಅರ್ಹರನ್ನು ಅಂತಿಮ ಪಟ್ಟಿಯಲ್ಲಿ ಸೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250