ಕಾರವಾರ:ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಿವಿಧ ಅಕ್ರಮಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಭಾಗವಹಿಸಿದ್ದಾರೆ.
ಸೆ.1ರಿಂದ ಆರಂಭಗೊಂಡಿರುವ ಪಾದಯಾತ್ರೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿಯತ್ತ ಸಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ರೂಪಾಲಿ ನಾಯ್ಕ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಜನರ ಮುಂದಿಡುವ ಉದ್ದೇಶದಿಂದ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪಾಲ್ಗೊಂಡಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ ಸೆ.10ರಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಸಿ ಟಿ ರವಿ ಸೇರಿದಂತೆ ಹಲವು ಪ್ರಮುಖ ನಾಯಕರು ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಹಸ್ರಾರು ಕಾರ್ಯಕರ್ತರು, ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
