ಭಟ್ಕಳ: ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ 24 ಗಂಟೆಯೊಳಗೇ ರಾನು ಗುಪ್ತ ಅವರು ಅಕ್ರಮ ಮರಳು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಆರು ಟಿಪ್ಪರ್ ಲಾರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ವಿವಿಧ ಕಡೆ ನಡೆದ ಕಾರ್ಯಾಚರಣೆ ಮಂಕಿ ಮತ್ತು ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ವಾಹನಗಳ ಮೇಲೆ ದಾಳಿ ನಡೆಸಿದ ಪೊಲೀಸರು ಮಂಕಿ ವ್ಯಾಪ್ತಿಯಲ್ಲಿ ಮೂರು ಹಾಗೂ ಮುರುಡೇಶ್ವರ ವ್ಯಾಪ್ತಿಯಲ್ಲಿ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ವೇಳೆ ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಲಾದ ಟಿಪ್ಪರ್‌ಗಳು ಮತ್ತು ವಶಕ್ಕೆ ಪಡೆದವರ ವಿರುದ್ಧ ಮಂಕಿ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಡೆದ ಈ ಕಾರ್ಯಾಚರಣೆ ಭಟ್ಕಳ ಪೊಲೀಸ್ ಉಪವಿಭಾಗದಲ್ಲಿ ಗಮನ ಸೆಳೆದಿದ್ದು, ಅಕ್ರಮ ಮರಳು ಸಾಗಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂಬ ಸಂದೇಶ ನೀಡಿದೆ.
