ಭಟ್ಕಳ: ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಘಟನೆ ಭಟ್ಕಳ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯ ಬೆನ್ನಲ್ಲೇ ಎರಡೂ ಕಡೆಯಿಂದ ದೂರುಗಳು ದಾಖಲಾಗಿದ್ದು, ಪೊಲೀಸರು ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಗಣೇಶ ವಿಗ್ರಹವನ್ನು ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ನಿಲ್ದಾಣ ರಸ್ತೆ ಹಾಗೂ ಮದರಸಾ ಮಾರ್ಗವಾಗಿ ಸಾಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಈ ಸಂಬಂಧ ಬಂದರ ರಸ್ತೆಯ ನಿವಾಸಿಗಳಾದ ಅಬ್ದುಲ್ ಅಲಿಂ ಹಾಗೂ ಶಾಹುಲ್ ಅಮೀನ್ ಗವಾಯಿ ಅವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೆರವಣಿಗೆ ಸಾಗುತ್ತಿದ್ದ ವೇಳೆ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾ ಕಟ್ಟಡದ ಕಡೆಗೆ ಕಲ್ಲು ಎಸೆಯಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ದಾಖಲಾದ ಬಳಿಕ ಈ ವಿಷಯ ತಿಳಿದು ಹಲವರು ಪೊಲೀಸ್ ಠಾಣೆ ಬಳಿ ಸೇರಿ, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪೊಲೀಸರು ಸ್ಥಳೀಯವಾಗಿ ಲಭ್ಯವಿರುವ ಮಾಹಿತಿ ಹಾಗೂ ಮೆರವಣಿಗೆಗೆ ಸಂಬಂಧಿಸಿದ ವಿವರಗಳನ್ನು ಪರಿಶೀಲಿಸಿದರು.
ಇದರ ಬೆನ್ನಲ್ಲೇ ತಲಾಂದ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಜು ಸಂಕಪ್ಪ ನಾಯ್ಕ ಅವರು ಗುರುವಾರ ಮುಂಜಾನೆ ಪೊಲೀಸರಿಗೆ ಪ್ರತಿದೂರು ನೀಡಿದ್ದಾರೆ. ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕಟ್ಟಡವೊಂದರ ಮೇಲಿನಿಂದ ಗಣೇಶ ವಿಗ್ರಹದ ದಿಕ್ಕಿನಲ್ಲಿ ಕಲ್ಲುಗಳನ್ನು ಎಸೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಹೀಗಾಗಿ ಒಂದೇ ಘಟನೆಯ ಕುರಿತು ಎರಡೂ ಕಡೆಯಿಂದ ಪರಸ್ಪರ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಎರಡೂ ದೂರುಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ ಪಾತ್ರವನ್ನು ತನಿಖೆ ಪೂರ್ಣಗೊಳ್ಳುವ ಮುನ್ನವೇ ಖಚಿತಪಡಿಸಲಾಗುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಹಾಗೂ ಎಎಸ್ಪಿ ರಾನು ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳು, ಪ್ರತ್ಯಕ್ಷದರ್ಶಿಗಳ ಮಾಹಿತಿ ಹಾಗೂ ಇತರ ಲಭ್ಯ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಘಟನೆಯ ನಿಖರ ಕಾರಣ ಮತ್ತು ಕಲ್ಲು ತೂರಾಟ ನಡೆದಿರುವ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಭಟ್ಕಳ ನಗರದಲ್ಲಿ ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
