ಅಕ್ಟೋಬರ್ 27, 2026
ಮಂಗಳವಾರ

ನಮ್ಮನ್ನು ಅನುಸರಿಸಿ

Uttara-Kannada

ಅಕ್ರಮ ಕಟ್ಟಡಗಳ ವಿರುದ್ಧ ಕರವೇ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ

Pakka News Web • 21 ಸೆಪ್ಟೆಂ 2026,

ಕಾರವಾರ: ಕಾರವಾರ ನಗರ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ನಡೆಯುತ್ತಿದೆ ಎನ್ನಲಾದ ಕಟ್ಟಡ ಕಾಮಗಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. 

ಅಕ್ರಮ ಕಟ್ಟಡಗಳಿಗೆ ಪರವಾನಗಿ ನೀಡುವ ಹಾಗೂ ನಿಯಮ ಉಲ್ಲಂಘನೆ ಕಂಡುಬಂದರೂ ಕ್ರಮ ಕೈಗೊಳ್ಳದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅಕ್ಷಯ್ ಎಸ್. ನಾಗೇಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರವಾರ ನಗರ ಮತ್ತು ಚಿತ್ತಾಕುಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ವಿಶೇಷವಾಗಿ ಸದಾಶಿವಗಡ ಭಾಗದಲ್ಲಿ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ಬಹುಮಹಡಿ ಕಟ್ಟಡಗಳು ನಿರ್ಮಾಣವಾಗುತ್ತಿವೆ ಎಂಬ ಆರೋಪವನ್ನು ಪ್ರತಿಭಟನಾಕಾರರು ಮುಂದಿಟ್ಟರು.

ಕಟ್ಟಡಗಳಿಗೆ ಮಂಜೂರಾಗಿರುವ ನಕ್ಷೆ ಮತ್ತು ಪರವಾನಗಿಗೆ ವಿರುದ್ಧವಾಗಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ವೇದಿಕೆ ಆರೋಪಿಸಿದೆ. ಕೆಲ ಕಟ್ಟಡಗಳಿಗೆ ಜಿ+4 ಮಹಡಿಗಳವರೆಗೆ ಅನುಮತಿ ನೀಡಲಾಗಿದ್ದರೂ, ಜಿ+6ರ ವರೆಗೆ ನಿರ್ಮಾಣ ಮಾಡಲಾಗಿದೆ ಎಂಬ ಆರೋಪವನ್ನು ಸಂಘಟನೆ ಮಾಡಿದೆ. ಇದಲ್ಲದೆ, ಕಟ್ಟಡಗಳ ಪಾರ್ಕಿಂಗ್‌ಗಾಗಿ ಮೀಸಲಿರಬೇಕಾದ ಸ್ಥಳಗಳನ್ನೂ ಇತರ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ದೂರಲಾಗಿದೆ.

ಅಕ್ರಮ ನಿರ್ಮಾಣಗಳಿಂದಾಗಿ ಪ್ರದೇಶದಲ್ಲಿ ನೈರ್ಮಲ್ಯ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಜನಸಂಖ್ಯೆ ಮತ್ತು ಕಟ್ಟಡಗಳ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸದೆ ನಿಯಮಬಾಹಿರ ಕಟ್ಟಡಗಳಿಗೆ ಅವಕಾಶ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಬಹುದು ಎಂದು ಪ್ರತಿಭಟನಾಕಾರರು ಹೇಳಿದರು.

ಈ ಸಂಬಂಧ ನಗರಾಭಿವೃದ್ಧಿ ಪ್ರಾಧಿಕಾರ, ಕಾರವಾರ ವತಿಯಿಂದ ಸಂಬಂಧಪಟ್ಟ ಪಂಚಾಯತ್ ಕಚೇರಿಗೆ ನೋಟಿಸ್ ನೀಡಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದೆ. ಆದರೆ, ನೋಟಿಸ್ ನೀಡಿದ ಬಳಿಕವೂ ಕಟ್ಟಡ ಕಾಮಗಾರಿಗಳ ವಿರುದ್ಧ ಪರಿಣಾಮಕಾರಿ ಕಾನೂನು ಕ್ರಮ ಕೈಗೊಳ್ಳದೆ ಕಾಮಗಾರಿ ಮುಂದುವರಿಯಲು ಅವಕಾಶ ನೀಡಲಾಗಿದೆ ಎಂಬುದು ಸಂಘಟನೆಯ ಪ್ರಮುಖ ಆರೋಪವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸಮಗ್ರ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರವಾನಗಿ ನೀಡುವ ಪ್ರಕ್ರಿಯೆ ಮತ್ತು ನಂತರದ ಮೇಲ್ವಿಚಾರಣೆಯಲ್ಲಿರುವ ಲೋಪಗಳನ್ನು ಪರಿಶೀಲಿಸಬೇಕು. ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ವೇದಿಕೆ ಮುಖ್ಯಮಂತ್ರಿ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.

ಕಾರವಾರ ನಗರ ಹಾಗೂ ಚಿತ್ತಾಕುಲಾ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ಕಾಮಗಾರಿಗಳಿಗೆ ಕಡಿವಾಣ ಹಾಕದಿದ್ದರೆ ಮುಂದಿನ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಸಮಸ್ಯೆ ಮುಂದುವರಿದರೆ ರಾಜ್ಯದ ವಿವಿಧ ಭಾಗಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಸಂಘಟಿಸಿ ಕಾರವಾರದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಮುಂದಿನ ಹೋರಾಟ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಕ್ಷಯ ನಾಗೇಕರ್ ನಗರದಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡ ಕಾಮಗಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಆಕ್ರೋಶ ವ್ಯಕ್ತಪಡಿಸುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಅಕ್ರಮ ಕಟ್ಟಡ ಕಾಮಗಾರಿಗಳಿಗೆ ಅನುಮತಿ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ನಿಯಮ ಉಲ್ಲಂಘನೆಯಾಗುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಅಕ್ರಮ ಕಟ್ಟಡ ಕಾಮಗಾರಿಗಳ ಕುರಿತು ಸಂಘಟನೆಯ ವತಿಯಿಂದ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮನವಿ ಸಲ್ಲಿಸುವುದರ ಜೊತೆಗೆ ಮಾಧ್ಯಮಗಳ ಮೂಲಕವೂ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಆದರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರೀಕ್ಷಿತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ದೂರಿದರು.

ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನಿಯಮಬಾಹಿರ ಕಾಮಗಾರಿಗಳಿಗೆ ಅನುಮತಿ ನೀಡುವ ಅಥವಾ ಅವುಗಳ ವಿರುದ್ಧ ಕ್ರಮ ಕೈಗೊಳ್ಳದೆ ಇರುವ ಅಧಿಕಾರಿಗಳ ಬಗ್ಗೆಯೂ ಪರಿಶೀಲನೆ ನಡೆಯಬೇಕು ಎಂದು ಅವರು ಆಗ್ರಹಿಸಿದರು.

ಅಕ್ರಮ ಕಾಮಗಾರಿಗಳ ವಿರುದ್ಧ ಧ್ವನಿ ಎತ್ತುತ್ತಿರುವ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೆಲವರು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಒತ್ತಡ ಹೇರುವ ಪ್ರಯತ್ನಗಳು ನಡೆದರೆ ಅದನ್ನು ಸಹಿಸುವುದಿಲ್ಲ ಎಂದು ಅಕ್ಷಯ ನಾಗೇಕರ ಎಚ್ಚರಿಸಿದರು.

ಕಾರವಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು. ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕಾರ್ಯಕರ್ತರನ್ನು ಕಾರವಾರಕ್ಕೆ ಕರೆತಂದು ಬೃಹತ್ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು. ನಗರದ ಅಭಿವೃದ್ಧಿಯ ಹೆಸರಿನಲ್ಲಿ ನಿಯಮಗಳನ್ನು ಕಡೆಗಣಿಸುವುದಕ್ಕೆ ಅವಕಾಶ ನೀಡಬಾರದು. ಸಾರ್ವಜನಿಕ ಹಿತಾಸಕ್ತಿ ಹಾಗೂ ನಗರ ಯೋಜನಾ ನಿಯಮಗಳನ್ನು ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕರವೇ ಒತ್ತಾಯಿಸಿದೆ.

ಪ್ರತಿಭಟನೆಯಲ್ಲಿ ಸಂಘಟನೆಯ ವಿವಿಧ ತಾಲೂಕಿನ ಪದಾಧಿಕಾರಿಗಳು ಇದ್ದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250