ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

State-National

ಕರವೇ ಹೋರಾಟಗಾರರ ವಿರುದ್ಧದ ಪ್ರಕರಣ ವಾಪಸ್‌ಗೆ ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Pakka News Web • 22 ಸೆಪ್ಟೆಂ 2026,

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಬೆಂಗಳೂರಿನ ಕೋಣನಕುಂಟೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರವೇ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವ ಕುರಿತು ಭರವಸೆ ನೀಡಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರವೇ ಹೋರಾಟಗಾರರ ವಿರುದ್ಧದ ಪ್ರಕರಣಗಳ ವಿಚಾರವಾಗಿ ಗೃಹ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಂಡು ಪ್ರಕರಣಗಳನ್ನು ವಾಪಸ್ ಪಡೆಯಲು ಪ್ರಯತ್ನಿಸುವುದಾಗಿ ತಿಳಿಸಿದರು. ತಮ್ಮ ರಾಜಕೀಯ ಜೀವನದ ಕಷ್ಟದ ದಿನಗಳಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಬೆಂಬಲವಾಗಿ ನಿಂತಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿ, ಕನ್ನಡ ಮತ್ತು ಕನ್ನಡಿಗರ ಹಿತಾಸಕ್ತಿಗಾಗಿ ಕರವೇ ನಿರಂತರವಾಗಿ ಹೋರಾಟ ನಡೆಸುತ್ತಿರುವುದನ್ನು ಶ್ಲಾಘಿಸಿದರು.

ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಮಂಡಿಸಿದ ಕರ್ನಾಟಕ ಸಮಗ್ರ ನೀತಿ ಶಿಕ್ಷಣದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ “ಕರ್ನಾಟಕ ಸೌರ್ವಭೌಮ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಗುರು ಶಾಂತೇಶ್ವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿದಂತೆ ಹಲವು ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

ಇದಲ್ಲದೆ ಸಚಿವ ಯು.ಟಿ. ಖಾದರ್, ಚೆಲುವರಾಯಸ್ವಾಮಿ, ಶಿವಲಿಂಗೇಗೌಡ, ಬಿ.ಡಿ.ಎ ಅಧ್ಯಕ್ಷ ಹ್ಯಾರಿಸ್, ಹಿರಿಯ ವಿದ್ವಾಂಸ ಹಂಪ ಬೋರಲಿಂಗಯ್ಯ, ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ, ರಾಜ್ಯ ಉಪಾಧ್ಯಕ್ಷ ಡಾ. ಪಿ. ಅಂಜನಪ್ಪ, ಸಂಘಟನಾ ಕಾರ್ಯದರ್ಶಿ ಅಬ್ಬಿಗೇರಿ ವಿನೋದ್, ಬೆಂಗಳೂರು ಮಹಾನಗರ ಅಧ್ಯಕ್ಷ ಧರ್ಮರಾಜ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯಿಂದ ಕರವೇ ಜಿಲ್ಲಾಧ್ಯಕ್ಷ ಅರುಣ ಹರಕಡೆ, ಜಿಲ್ಲಾ ಉಪಾಧ್ಯಕ್ಷ ವಿನಾಯಕ ನಾಯಕ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಂಜುನಾಥ ನಾಯಕ, ಪ್ರಧಾನ ಕಾರ್ಯದರ್ಶಿ ಗಣಪತಿ ನಾಯ್ಕ ಹಾಗೂ ಸಾಮಾಜಿಕ ಜಾಲತಾಣಗಳ ಮುಖ್ಯ ಸಂಚಾಲಕ ಶ್ರೀಕಾಂತ ಪಟಗಾರ ಸೇರಿದಂತೆ ಹಲವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250