ಅಕ್ಟೋಬರ್ 28, 2026
ಬುಧವಾರ

ನಮ್ಮನ್ನು ಅನುಸರಿಸಿ

Uttara-Kannada

ಪಶ್ಚಿಮ ಪದವೀಧರ ಕ್ಷೇತ್ರ: ಸೆ.29ಕ್ಕೆ ಅಧಿಸೂಚನೆ

Pakka News Web • 26 ಸೆಪ್ಟೆಂ 2026,

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಸೆ.29ರಂದು ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಚುನಾವಣಾ ಪ್ರಕ್ರಿಯೆ ಚುರುಕುಗೊಂಡಿದೆ.

ನಾಮಪತ್ರ ಸಲ್ಲಿಸಲು ಅ.6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇದೇ ದಿನ ಉಮೇದುವಾರಿಕೆ ಹಿಂಪಡೆಯಲು ಕೊನೆಯ ಅವಕಾಶವಿದೆ. ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ.

ನಾಮಪತ್ರಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಡಿಸೆಂಬರ್ 30, 2025ರ ನಂತರ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆಯ ಅವಧಿಯಲ್ಲಿ ನಮೂನೆ–18ರಲ್ಲಿ ಸ್ವೀಕರಿಸಲಾದ ಅರ್ಜಿಗಳ ಆಧಾರದ ಮೇಲೆ ಪೂರಕ ಮತದಾರರ ಪಟ್ಟಿ–2ರ ಸಿದ್ಧತಾ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣೆಗೆ ಸಂಬಂಧಿಸಿದ ಮಾಹಿತಿ, ದೂರು ಹಾಗೂ ಮೇಲ್ವಿಚಾರಣೆಗಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ 24×7 ಸಹಾಯವಾಣಿ ಕೇಂದ್ರ ಮತ್ತು ದೂರು ಮೇಲ್ವಿಚಾರಣಾ ಕೋಶವನ್ನು ತೆರೆಯಲಾಗಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಅಥವಾ ಮಾರ್ಗಸೂಚಿಗಳ ಉಲ್ಲಂಘನೆ ಕಂಡುಬಂದಲ್ಲಿ 0831-2451229 ಸಹಾಯವಾಣಿಗೆ ಮಾಹಿತಿ ನೀಡುವಂತೆ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250