ಶಿರಸಿ: ಮನೆಯ ಬಾತ್ರೂಂ ಮೇಲಿನ ಹಂಚು ತೆಗೆದು ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
2026ರ ಜನವರಿ 22ರ ರಾತ್ರಿ 8.30ರಿಂದ ಜನವರಿ 26ರ ಸಂಜೆ 6.30ರ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಬಾತ್ರೂಂ ಮೇಲಿನ ಹಂಚು ತೆಗೆದು ಒಳನುಗ್ಗಿದ್ದರು. ಬಳಿಕ ಟ್ರೆಜರಿಯ ಬಾಗಿಲು ತೆರೆದು, ಒಳಗಿದ್ದ ಲಾಕರ್ನ್ನು ಗಟ್ಟಿಯಾದ ವಸ್ತುವಿನಿಂದ ಮೀಟಿ ತೆಗೆದು, ಅದರಲ್ಲಿದ್ದ ₹1.20 ಲಕ್ಷ ನಗದು ಹಾಗೂ 10 ಗ್ರಾಂ ತೂಕದ ₹60 ಸಾವಿರ ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ.
ಈ ಕುರಿತು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 07/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಕಲಂ 331(3), 331(4) ಹಾಗೂ 305ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದರು. ಈ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ, ಪ್ರಸ್ತುತ ಮುರುಡೇಶ್ವರದಲ್ಲಿ ವಾಸವಿದ್ದ ಹನುಮಂತ ತೋಲಪ್ಪ ಕೋಂಚಿಕೊರವರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಪೊಲೀಸರ ಮಾಹಿತಿಯ ಪ್ರಕಾರ, ಬಂಧಿತ ಆರೋಪಿ ರೂಢಿಗತ ಅಪರಾಧಿಯಾಗಿದ್ದು, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮನೆಕಳ್ಳತನ, ದರೋಡೆ, ಡಕಾಯಿತಿ, ಕುರಿ ಕಳ್ಳತನ ಹಾಗೂ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಹೊಸನಗರ ಮತ್ತು ಸಾಗರ ವ್ಯಾಪ್ತಿಯಲ್ಲಿಯೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಕಾನೂನು ಪ್ರಕ್ರಿಯೆ ಅನುಸರಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಸಂಪತ್ ಸಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್ಐಗಳಾದ ಬಸವರಾಜ ಕನಶೆಟ್ಟಿ ಮತ್ತು ಗೀತಾ ಕಲಘಟಗಿ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ಕೋಟೇಶ್ವರ ನಾಗರವಳ್ಳಿ, ಮಂಜುನಾಥ ರೆಡ್ಡಿ, ಸಂದೀಪ ನಿಂಬಾಯಿ, ರಾಕೇಶ ಎನ್.ಎಚ್., ಅಶೋಕ ಹರಿಕಂತ್ರ ಹಾಗೂ ಮುರುಡೇಶ್ವರ ಠಾಣೆಯ ಸಿಬ್ಬಂದಿ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.
