ಹೊನ್ನಾವರ: ಪಟ್ಟಣದ ಪೊಲೀಸ್ ಠಾಣೆ ಎದುರಿನ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಟೋಕನ್ ಕೌಂಟರ್ ಬಳಿ ರವಿವಾರ ಸಂಜೆ ಕೆಲವರು ಪರಸ್ಪರ ಬೈದಾಡಿಕೊಂಡು ಗಲಾಟೆ ನಡೆಸಿದ ಘಟನೆ ನಡೆದಿದೆ. ಈ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕೆಲವರು ಟೋಕನ್ ಕೌಂಟರ್ ಬಳಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು, ಕೈಕೈ ಮಿಲಾಯಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗದ್ದಲ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆಯಾಗಿದೆ ಎಂದು ಆರೋಪಿಸಲಾಗಿದೆ.
ಗಲಾಟೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕೆಲವರು ಪರಸ್ಪರ ಬಾಯಿಗೆ ಬಂದಂತೆ ಬೈದಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಗಲಾಟೆಯ ಬಳಿಕ ಟೋಕನ್ ಕೌಂಟರ್ನಿಂದ ಅಲ್ಲಿದ್ದವರು ತೆರಳಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟುಮಾಡಿದ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
