ಭಟ್ಕಳ: ಸಾರ್ವಜನಿಕ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಹಿನ್ನೆಲೆಯಲ್ಲಿ ಭಟ್ಕಳದ ಮೂಸಾನಗರದ ನಿವಾಸಿ ಇಸ್ಮಾಯಿಲ್ ಹವ್ವಾ ಎಂಬಾತನನ್ನು ಉತ್ತರ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇಸ್ಮಾಯಿಲ್ ಹವ್ವಾ (46) ಗಡಿಪಾರಾದ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋಹತ್ಯಾ ನಿಷೇಧ ಕಾಯ್ದೆಯಡಿ ಒಟ್ಟು 7 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿದ್ದು, ಇನ್ನುಳಿದ ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. ತನಗಿರುವ ಅಪರಾಧ ಹಿನ್ನೆಲೆಯನ್ನೇ ಬಂಡವಾಳವಾಗಿಸಿಕೊಂಡು ಆರೋಪಿಯು ಭಟ್ಕಳ ತಾಲೂಕಿನಾದ್ಯಂತ ತನ್ನ ಕಾನೂನುಬಾಹಿರ ಚಟುವಟಿಕೆಗಳನ್ನು ಮುಂದುವರಿಸಿದ್ದ. ಇದರಿಂದ ಸಾರ್ವಜನಿಕ ಸುರಕ್ಷತೆ, ನೆಮ್ಮದಿ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗುವ ಸಾಧ್ಯತೆ ಇರುವುದನ್ನು ಗಂಭೀರವಾಗಿ ಪರಿಗಣಿಸಿದ ಭಟ್ಕಳ ನಗರ ಪೊಲೀಸ್ ನಿರೀಕ್ಷಕರು, ಆರೋಪಿಯನ್ನು ಗಡಿಪಾರು ಮಾಡುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವಿವರವಾದ ಪ್ರಸ್ತಾವನೆ ಸಲ್ಲಿಸಿದ್ದರು.
ಈ ಪ್ರಸ್ತಾವನೆಯನ್ನು ಸ್ವೀಕರಿಸಿ ಸಮಗ್ರ ವಿಚಾರಣೆ ನಡೆಸಿದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಕಾರವಾರದ ಪೊಲೀಸ್ ಅಧೀಕ್ಷಕರು, ಅಭಿಯೋಜನೆ ಮತ್ತು ಪ್ರತಿವಾದಿಗಳ ವಾದ-ಪ್ರತಿವಾದಗಳನ್ನು ಆಲಿಸಿದರು. ಆರೋಪಿಯಿಂದ ಸಮಾಜದ ಶಾಂತಿ ಕದಡುವ ಆತಂಕವಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಜೂನ್ 17ರಂದು ಆದೇಶ ಹೊರಡಿಸಿದ್ದಾರೆ.
ದಂಡಾಧಿಕಾರಿಗಳ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಭಟ್ಕಳ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಆರೋಪಿ ಇಸ್ಮಾಯಿಲ್ ಹವ್ವಾನನ್ನು ವಶಕ್ಕೆ ಪಡೆದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಪೊಲೀಸರ ಈ ಕ್ರಮವು ಭಟ್ಕಳದ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
