ಕಾರವಾರ:ಮುಂಗಾರು ಮಳೆ ಹಾಗೂ ಇನ್ನಿತರ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ತ್ವರಿತವಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ಸಮರ್ಥ ಮೇಲ್ವಿಚಾರಣೆ ನಡೆಸುವ ಸಲುವಾಗಿ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಲುವಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಉಸ್ತುವಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಕ್ಕೆ ತುತ್ತಾಗುವ ಸೂಕ್ಷ್ಮ ಪ್ರದೇಶವಾಗಿರುವ ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿಯನ್ನು ಯು.ಟಿ. ಖಾದರ್ ಫರೀದ್ ಮುಂದಿನ ಆದೇಶದ ವರೆಗೆ ಅವರಿಗೆ ವಹಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೊತೆಗೆ ಕರಾವಳಿ ಮತ್ತು ಮಲೆನಾಡು ಭಾಗದ ಪ್ರಮುಖ ಜಿಲ್ಲೆಗಳಾದ ಉಡುಪಿ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಮೇಲ್ವಿಚಾರಣೆಯ ಹೆಚ್ಚುವರಿ ಹೊಣೆಗಾರಿಕೆಯೂ ಇವರ ಹೆಗಲಿಗೇರಿದೆ.

ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಲು ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳು ಸೇರಿದಂತೆ ಒಟ್ಟು 13 ಜನರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿರಲಿದ್ದು, ಯಾವುದೇ ತುರ್ತು ಸಂದರ್ಭ ಎದುರಾದರೂ ಸ್ಥಳೀಯವಾಗಿ ಸಚಿವರು ಲಭ್ಯವಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.

ಈ ಪ್ರಮುಖ ಆದೇಶದನ್ವಯ ಇತರೆ ಜಿಲ್ಲೆಗಳ ಉಸ್ತುವಾರಿಯನ್ನು ವಿವಿಧ ಸಚಿವರಿಗೆ ಹಂಚಿಕೆ ಮಾಡಲಾಗಿದ್ದು, ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹೊಣೆ ನೀಡಲಾಗಿದೆ. ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದರೆ, ರಾಮಲಿಂಗಾರೆಡ್ಡಿ ಅವರು ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳನ್ನು ಎಂ.ಬಿ. ಪಾಟೀಲ್ ಅವರಿಗೆ ವಹಿಸಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿಯನ್ನು ಕೆ.ಜೆ. ಜಾರ್ಜ್ ಅವರಿಗೆ ನೀಡಲಾಗಿದೆ.

ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ನಿರ್ವಹಣೆಯನ್ನು ಕೃಷ್ಣ ಬೈರೇಗೌಡ ಅವರಿಗೆ ಒಪ್ಪಿಸಲಾಗಿದ್ದು, ಈಶ್ವರ್ ಖಂಡ್ರೆ ಅವರು ಬೀದರ್ ಮತ್ತು ಗದಗ ಜಿಲ್ಲೆಗಳ ಉಸ್ತುವಾರಿ ವಹಿಸಲಿದ್ದಾರೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜವಾಬ್ದಾರಿಯನ್ನು ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗಿದ್ದು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳನ್ನು ಪ್ರಿಯಾಂಕ್ ಖರ್ಗೆ ಮುನ್ನಡೆಸಲಿದ್ದಾರೆ. ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹೊಣೆಯನ್ನು ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ನೀಡಲಾಗಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿಯನ್ನು ಬೈರತಿ ಸುರೇಶ್ ಅವರಿಗೆ ಹಂಚಿಕೆ ಮಾಡಲಾಗಿದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣೆಯ ಸಂಪೂರ್ಣ ಉಸ್ತುವಾರಿಯನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ.
ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ, ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಉಪ ಕಾರ್ಯದರ್ಶಿ (ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಎಸ್. ಶ್ರೀನಿವಾಸ್ ಅವರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೂ ಸಚಿವರ ನೇರ ಮೇಲ್ವಿಚಾರಣೆಯಲ್ಲಿ ಜಿಲ್ಲಾಡಳಿತಗಳು ತಕ್ಷಣ ಸ್ಪಂದಿಸಲು ಈ ವಿಕೇಂದ್ರೀಕೃತ ಜವಾಬ್ದಾರಿ ಹಂಚಿಕೆ ಅತ್ಯಂತ ನೆರವಾಗಲಿದೆ.
