ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: 6 ಜನರ ಸ್ಥಳದಲ್ಲೇ ಸಾವು

Pakka News Web • 9 ಜುಲೈ 2026,

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ಬಳಗಾರ್ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಪ್ರವಾಸಕ್ಕೆ ತೆರಳಿದ್ದ ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ವಾಹನದ ಚಾಲಕ ಸಂಜೀವ್ (ಸಂಜಯ) ಅಂಗಡಿ, ಬಸವರಾಜ್, ಅಭಿಷೇಕ್ ಈಶ್ವರ್, ಅಕ್ಷಯ್, ಅಭಿಷೇಕ್ ಹಾಗೂ ಮಂಜುನಾಥ ಚುಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಶಿವರಾಜ್ ದುರ್ಗಪ್ಪ ಮಡಿವಾಳ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ ಹಾಗೂ ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿಯೂ ಗಂಭೀರವಾಗಿದೆ.

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ತೂಫಾನ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿತ್ತು. ವಾಹನದೊಳಗೆ ಸಿಲುಕಿದ್ದವರನ್ನು ಹೊರತೆಗೆದುಕೊಳ್ಳಲು ರಕ್ಷಣಾ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ. ಗೆಳೆಯರ ಗುಂಪು ಧರ್ಮಸ್ಥಳ ಹಾಗೂ ಮಂಗಳೂರು ಕಡೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಅರಬೈಲ್ ಘಟ್ಟದ ತಿರುವಿನಲ್ಲಿ ಎದುರಿನಿಂದ ಬಂದ ಲಾರಿ ಅವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನುಜ್ಜುಗುಜ್ಜಾಗಿದ್ದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250