ನಗರದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 272 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಪಲ್ಸರ್ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನನ್ನು ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರು ನಿವಾಸಿ ಸೈಯದ್ ಸಾದಿಕ್ ತಂದೆ ಮುಜೀಬು (27) ಎಂದು ಗುರುತಿಸಲಾಗಿದೆ. ಜುಲೈ 8ರ ರಾತ್ರಿ ಶಿರಸಿ–ಯಲ್ಲಾಪುರ ರಸ್ತೆಯ ಅರಣ್ಯ ನೌಕರರ ಸಮುದಾಯ ಭವನದ ಸಮೀಪ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು.
ಪೊಲೀಸರ ತನಿಖೆಯಲ್ಲಿ ಆರೋಪಿಯಿಂದ 272 ಗ್ರಾಂ ಗಾಂಜಾ ಮಾದಕ ವಸ್ತು ಪತ್ತೆಯಾಗಿದ್ದು, ಸಾಗಾಟಕ್ಕೆ ಬಳಸಿದ್ದ ಪಲ್ಸರ್ ಬೈಕ್‌ನ್ನೂ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ, ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಸಿಪಿಐ ಸಂಪತ್‌ಕುಮಾರ್ ಸಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಪಿಎಸ್ಐ ಬಸವರಾಜ್ ಕರಶೆಟ್ಟಿ ಮತ್ತು ಗೀತಾ ಜಿ. ಕಲಘಟಗಿ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ಕೋಟೇಶ್ ನಾಗರೊಳ್ಳಿ, ಸಂದೀಪ್ ನಿಂಬಾಳ್ಕರ್, ರಾಕೇಶ್ ಎನ್.ಎಚ್. ಹಾಗೂ ಇನ್ನಿತರರು ಇದ್ದರು.
