ಜೋಯಿಡಾ ತಾಲೂಕಿನ ಜಗಲ್‌ಬೆಟ್ ಬಳಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಕೊಲ್ಹಾಪುರ ಮೂಲದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ದಾಂಡೇಲಿಯಿಂದ ರಾಮನಗರ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ, ಗೋಕರ್ಣಕ್ಕೆ ತೆರಳುತ್ತಿದ್ದ ಕೊಲ್ಹಾಪುರ ಮೂಲದ ಯುವಕನ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವಕ ರಸ್ತೆಗೆ ಬಿದ್ದಿದ್ದು, ಈ ವೇಳೆ ಆತನ ಕಾಲಿನ ಮೇಲೆ ಬಸ್ ಹರಿದಿದ್ದರಿಂದ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಗಾಯಾಳುವನ್ನು ರಕ್ಷಿಸಿ ರಾಮನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಯುವಕನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್-ಬೈಕ್ ನಡುವೆ ಅಪಘಾತ :ಯುವಕ ಗಂಭೀರ
