ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವ್ಯಕ್ತಿಯಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುರ್ಡೇಶ್ವರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ ಕೇವಲ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಟ್ಕಳ ತಾಲೂಕಿನ ಕಟಗಾರಕೊಪ್ಪದ ಹಲ್ಲಂದಿ ನಿವಾಸಿ, ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿರುವ ನಾಗರಾಜ ಗಣಪತಿ ಗೊಂಡ (29) ಬಂಧಿತ ಆರೋಪಿ.
ಜುಲೈ 20ರ ರಾತ್ರಿ ದೂರುದಾರರು ರಾಷ್ಟ್ರೀಯ ಹೆದ್ದಾರಿ-66ರ ಮುಖಾಂತರ ತಮ್ಮ ಮನೆಗೆ ತೆರಳುತ್ತಿದ್ದಾಗ, ದೊಡ್ಡ ಬಲಸೆ ಕ್ರಾಸ್ ಹತ್ತಿರ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ದೂರುದಾರರ ಕುತ್ತಿಗೆಯಲ್ಲಿದ್ದ ಸುಮಾರು 22 ಗ್ರಾಂ ತೂಕದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 309(4) ರಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತೀವ್ರತೆಯನ್ನು ಪರಿಗಣಿಸಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರಕರಣ ದಾಖಲಾದ 24 ಗಂಟೆಯೊಳಗಾಗಿ ಆರೋಪಿ ನಾಗರಾಜನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಸುಲಿಗೆ ಮಾಡಿದ್ದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ಸುಮಾರು 3 ಲಕ್ಷರೂ. ರೂ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ ಬಿ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಮುರ್ಡೇಶ್ವರ ವೃತ್ತ ತನಿಖಾಧಿಕಾರಿ ಹಾಗೂ ಸಿಪಿಐ ಜಗದೀಶ ಹಂಚನಾಳ ನೇತೃತ್ವದಲ್ಲಿ, ಪಿಎಸ್‍ಐ ಹಣಮಂತ ಬಿರಾದಾರ ಹಾಗೂ ಸಿಬ್ಬಂದಿಗಳಾದ ಸುಬ್ರಹ್ಮಣ್ಯ ನಾಯ್ಕ, ಅರುಣ ಪಿಂಟೋ, ಮಂಜುನಾಥ ಲಕ್ಕಾಪುರ, ಬಿಲಾಲಹೃದ ಸಿದ್ದಾಪು, ವಿಜಯ ನಾಯ್ಕ, ಮಹೇಶ ಸಮನಳ್ಳಿ, ಸಿದ್ದಪ್ಪ ಕಾಂಬಳೆ, ಮತ್ತು ಸದಾಶಿವ ಕಟ್ಟಿಮನಿ, ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
