ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

46 ವರ್ಷಗಳ ಬಳಿಕ ಕಳ್ಳತನ ಪ್ರಕರಣದ ಆರೋಪಿ ಬಂಧನ

Pakka News Web • 16 ಆಗಸ್ಟ್ 2026,

ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್‌ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ ತಂದೆ ಅಬ್ದುಲ್ ರೆಹಮಾನ್ ಖಾಜಾ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1980ರಲ್ಲಿ ದಾಖಲಾಗಿದ್ದ ಮೂರು ಕಳ್ಳತನ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ. ಭಾರತೀಯ ದಂಡ ಸಂಹಿತೆಯ ಕಲಂ 454, 457 ಹಾಗೂ 380ರ ಅಡಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಸತತ 46 ವರ್ಷಗಳ ಕಾಲ ಪತ್ತೆಯಾಗದೆ ಉಳಿದಿದ್ದ ಈತನನ್ನು ಬಂಧಿಸಲು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.

ತಾಂತ್ರಿಕ ಮಾಹಿತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯ ಇರುವಿಕೆಯ ಸುಳಿವು ಪತ್ತೆಹಚ್ಚಿ, ಆಗಸ್ಟ್ 14ರಂದು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250