ದಾಂಡೇಲಿ: ನಗರದ ಮಾರುತಿ ನಗರದಲ್ಲಿ ಶಾಲೆಯೊಂದರ ಸಮೀಪವೇ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸರನ್ನು ಕಾರ್ಯಾಚರಣೆಗೆ ಇಳಿಸಿದ್ದು, ದಾಳಿಯ ವೇಳೆ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತರನ್ನು ಮಾರುತಿ ನಗರದ ಅಕ್ಷಯ ವಾಡೇಕರ (27), ಹಳಿಯಾಳ ತಾಲೂಕಿನ ಅಡಿಕೆಹೊಸೂರ ಗ್ರಾಮದ ತೌಸೀಫ್ ನಜೀರ ಅಹಮ್ಮದ್ ಅಜಗಾಂವಕರ (22), ಟೌನ್‌ಶಿಪ್ ನಿವಾಸಿಗಳಾದ ಸಾಹೀಲ್ ಅನ್ವರ್ ಶೇಖ್ (21) ಮತ್ತು ರಾಜೇಶ್ ದಯಾಶಂಕರ ಯಾದವ್ (23) ಎಂದು ಗುರುತಿಸಲಾಗಿದೆ.
ಮಾರುತಿ ನಗರದ ಅಂಬೇಡ್ಕರ್ ಶಾಲೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ದಾಂಡೇಲಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ಈ ವೇಳೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಅವರ ಬಳಿಯಿದ್ದ 241 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು ₹10 ಸಾವಿರ ಎಂದು ಅಂದಾಜಿಸಲಾಗಿದೆ.
ಬಂಧಿತರ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಡಿವೈಎಸ್‌ಪಿ ಶಿವಾನಂದ ಮದರಕಂಡಿ ಹಾಗೂ ಸಿಪಿಐ ಶಿವಾನಂದ ಅಂಬೀಗೇರ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಪಿಎಸ್‌ಐಗಳಾದ ಅಮೀನ್ ಅತ್ತಾರ ಮತ್ತು ಕಿರಣ ಪಾಟೀಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪೊಲೀಸ್ ಸಿಬ್ಬಂದಿ ಸಹಕರಿಸಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ನಡೆಸಿದ ಈ ಕಾರ್ಯಾಚರಣೆ ಗಮನ ಸೆಳೆದಿದೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
