ಅಂಕೋಲಾ: ಜನವಸತಿ ಪ್ರದೇಶದ ಸಮೀಪ ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾದರೂ, ಅನಿಲ ಸೋರಿಕೆಯಾಗದೆ ಸಂಭವನೀಯ ಭಾರಿ ಅನಾಹುತ ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಬೇಡ್ಕರ್ ಸರ್ಕಲ್ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಯತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಅಂಕೋಲಾ ಮೂಲಕ ಸಂಚರಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ. ಧಾರಾಕಾರ ಮಳೆಯಿಂದ ರಸ್ತೆ ಸ್ಪಷ್ಟವಾಗಿ ಕಾಣದ ಹಿನ್ನೆಲೆಯಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

ಅನಿಲ ತುಂಬಿದ್ದ ಟ್ಯಾಂಕರ್ ಜನವಸತಿ ಪ್ರದೇಶದ ಸಮೀಪವೇ ಪಲ್ಟಿಯಾಗಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಿದ್ದರೆ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಜನರು ಆತಂಕಗೊಂಡಿದ್ದರು. ಆದರೆ ವಾಹನ ಪಲ್ಟಿಯಾದ ಬಳಿಕವೂ ಯಾವುದೇ ಅನಿಲ ಸೋರಿಕೆ ಸಂಭವಿಸದಿರುವುದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸುರಕ್ಷಿತವಾಗಿ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಂಕೋಲಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುರಕ್ಷತಾ ಕ್ರಮಗಳನ್ನು ಕೈಗೊಂಡ ಪೊಲೀಸರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ವ್ಯವಸ್ಥೆ ಮಾಡಿದರು.
ಘಟನೆಗೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
