ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ದನ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿ ಬಂಧನ, ಕಾರು ವಶ

Pakka News Web • 13 ಸೆಪ್ಟೆಂ 2026,

ಕುಮಟಾ: ಪಟ್ಟಣದಲ್ಲಿ ರಾತ್ರಿ ವೇಳೆ ದನವನ್ನು ಕಾರಿನಲ್ಲಿ ಹಾಕಿಕೊಂಡು ಕಳ್ಳತನ ಮಾಡಿದ್ದ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಮಾರುತಿ ಸುಜುಕಿ ಎರ್ಟಿಗಾ ಕಾರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 10ರಂದು ಬೆಳಗಿನ ಜಾವ 2.14ರ ಸುಮಾರಿಗೆ ಕುಮಟಾ ಪಟ್ಟಣದ ರೈಸ್ ಮಿಲ್ ಪಕ್ಕದ ರಸ್ತೆಯಲ್ಲಿ ಮಲಗಿದ್ದ ದನವೊಂದನ್ನು ಬಿಳಿ ಬಣ್ಣದ ಕಾರಿನಲ್ಲಿ ಬಂದ ಆರೋಪಿತರು ಹಿಡಿದು ಕಾರಿಗೆ ಹಾಕಿಕೊಂಡು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಕುರಿತು ನೀಡಿದ ದೂರಿನ ಆಧಾರದಲ್ಲಿ ಕುಮಟಾ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ. 184/2026ರಂತೆ ಬಿಎನ್‌ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ತನಿಖೆ ಕೈಗೊಂಡ ತಂಡವು ಕೃತ್ಯದ ಜಾಡು ಪತ್ತೆಹಚ್ಚಲು ಕುಮಟಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ 60ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿತು. ಸಿಸಿಟಿವಿ ದೃಶ್ಯಗಳು ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆಯನ್ನು ಮುಂದುವರಿಸಿದ ಪೊಲೀಸರು ಆರೋಪಿಯ ಸುಳಿವು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ಮಹಮ್ಮದ್ ಶಬೀರ ಅಲಿಯಾಸ್ ಸಮೀರ್ ಅಲಿಯಾಸ್ ಗುರ್ಕಾ ಸಮೀರ್, 30, ತೋಕೂರು, ಬೈಕಂಪಾಡಿ, ಮಂಗಳೂರು ನಿವಾಸಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಬಂಧಿತನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕೆಎ-20/ಎಂಸಿ-4268 ನೋಂದಣಿ ಸಂಖ್ಯೆಯ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರ ತನಿಖೆ ಮುಂದುವರಿದಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನು ಗುಪ್ತ ಅವರ ಮಾರ್ಗದರ್ಶನದಲ್ಲಿ ಕುಮಟಾ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ನೇತೃತ್ವದಲ್ಲಿ ಪಿಎಸ್ಐಗಳಾದ ಖಾದರ್ ಬಾಷಾ, ರವಿ ಗುಡ್ಡಿ ಹಾಗೂ ವಿಠ್ಠಲ ಮಲವಡಕರ್ ಮತ್ತು ಸಿಬ್ಬಂದಿ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ, ಕಿರಣ ನಾಯ್ಕ ಸೇರಿದಂತೆ ಉಡುಪಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣದ ತನಿಖೆಯಲ್ಲಿ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಮರ್ಥವಾಗಿ ಬಳಸಿಕೊಂಡು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವ ಪೊಲೀಸ್ ತಂಡದ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250