ಶಿರಸಿ: ಗಣಪತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಯುವಕರ ನಡುವೆ ನಡೆದ ಮಾತಿನ ಚಕಮಕಿಯ ಬಳಿಕ ಯುವಕನೊಬ್ಬನಿಗೆ ಚೂಪಾದ ಆಯುಧದಿಂದ ಇರಿದ ಘಟನೆ ಶುಕ್ರವಾರ ತಡರಾತ್ರಿ ಶಿರಸಿ ನಗರದ ಮಾರ್ಕೆಟ್ ರಸ್ತೆಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ನಗರದ ಕೆಇಬಿ ಸಮೀಪದ ಮಾರುತಿಗಲ್ಲಿ ನಿವಾಸಿ ಆದರ್ಶ ಆನಂದ ಮರಾಟೆ (21) ಗಾಯಗೊಂಡಿದ್ದಾರೆ. ಕುತ್ತಿಗೆ ಹಾಗೂ ಕೈ ಭಾಗಕ್ಕೆ ಗಾಯಗಳಾಗಿದ್ದು, ಅವರನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾತಿನ ಚಕಮಕಿ ನಡೆದ ಬಳಿಕ ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಆದರ್ಶ ಅವರಿಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಕಸ್ತೂರಬಾ ನಗರದ ಗಿರೀಶ ನಾಯ್ಕ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಗಾಯಾಳುವಿನ ಸಂಬಂಧಿಕರು ಆರೋಪಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಶಿರಸಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
