ಗೋಕರ್ಣ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ಗೋಕರ್ಣ ಪೊಲೀಸರು ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಎರಡೂ ಪ್ರಕರಣಗಳಲ್ಲಿ ಪಶ್ಚಿಮ ಬಂಗಾಳ ಮೂಲದ ಯುವಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಮಾದಕ ವಸ್ತು ಸೇವಿಸಿರುವುದು ಪಾಸಿಟಿವ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.27ರಂದು ಸಂಜೆ 4 ಗಂಟೆ ಸುಮಾರಿಗೆ ಗೋಕರ್ಣ-ಓಂ ಬೀಚ್ ರಸ್ತೆಯ ಕುಡ್ಲೆ ಬೀಚ್ ಕ್ರಾಸ್ ಬಳಿ ಪೊಲೀಸರು ಗಸ್ತು ನಡೆಸುತ್ತಿದ್ದ ವೇಳೆ, ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಷ್ರಾ ನಿವಾಸಿಯಾಗಿದ್ದು, ಪ್ರಸ್ತುತ ಹೈದರಾಬಾದ್ನ ಟೋಲಿ ಚೌಕಿ ಪ್ರದೇಶದಲ್ಲಿ ವಾಸಿಸುತ್ತಿರುವ 28 ವರ್ಷದ ಅಗ್ನಿವೋ ಬ್ಯಾನರ್ಜಿ ಎಂಬಾತ ಅನುಮಾನಾಸ್ಪದವಾಗಿ ಕಂಡುಬಂದಿದ್ದಾನೆ. ಮಾದಕ ವಸ್ತು ಸೇವಿಸಿರುವ ಶಂಕೆಯ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಿದ ಪರೀಕ್ಷೆಯ ‘ABON URIN DRUG TEST’ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಆರೋಪದಡಿ ಎನ್ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ.
ಇದೇ ದಿನ ಸಂಜೆ 4.50ರ ಸುಮಾರಿಗೆ ಗೋಕರ್ಣ-ಓಂ ಬೀಚ್ ರಸ್ತೆಯ ಅಶೋಕ ಮಠಕ್ಕೆ ತೆರಳುವ ಕ್ರಾಸ್ ರಸ್ತೆಯ ಬಳಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮತ್ತೊಬ್ಬ ಯುವಕ ಅನುಮಾನಾಸ್ಪದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಷ್ರಾ ನಿವಾಸಿ 28 ವರ್ಷದ ಸೌಮ್ಯ ಸಿನ್ಹಾ ಚೌಧರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿಯೂ ‘ABON URIN DRUG TEST’ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ಆತನ ವಿರುದ್ಧವೂ ಎನ್ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ.
