ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಪೊಲೀಸ್ ಠಾಣೆಯಲ್ಲೇ ಇನ್ಸ್ಪೆಕ್ಟರ್‌ಗೆ ಬೆದರಿಕೆ!

Pakka News Web • 30 ಸೆಪ್ಟೆಂ 2026,

ಕಾರವಾರ: ಅಮಾನತಿಗೆ ಕಾರಣರಾದರೆಂದು ಆರೋಪಿಸಿ ಪೊಲೀಸ್ ಠಾಣೆಗೆ ತೆರಳಿದ ಅಮಾನತುಗೊಂಡ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್, ಅಲ್ಲಿನ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 26ರಂದು ಮಧ್ಯಾಹ್ನ ಸುಮಾರು 1.45ರ ವೇಳೆಗೆ ಕಾರವಾರ ಶಹರ ಪೊಲೀಸ್ ಠಾಣೆಗೆ ತೆರಳಿದ ಆರೋಪಿಯು, ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ಅವರೊಂದಿಗೆ ಏರುಧ್ವನಿಯಲ್ಲಿ ಮಾತನಾಡಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ತಮ್ಮನ್ನು ಅಮಾನತುಗೊಳಿಸಲು ಠಾಣೆಯ ಇನ್ಸ್ಪೆಕ್ಟರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಇನ್ಸ್ಪೆಕ್ಟರ್ ಅವರನ್ನು ಕರೆಯುವಂತೆ ಒತ್ತಾಯಿಸಿದ್ದಾನೆ. ಅಲ್ಲದೆ, ಅವರನ್ನು ಸುಮ್ಮನೆ ಬಿಡುವುದಿಲ್ಲ, ಒಂದು ಕೈ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಗಸ್ತು ಕರ್ತವ್ಯ ಮುಗಿಸಿ ಠಾಣೆಗೆ ವಾಪಸಾದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಅವರೊಂದಿಗೂ ಆರೋಪಿ ದುರ್ವರ್ತನೆ ತೋರಿದ್ದು, ಅವರು ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ ಮೊದಲಿಗೆ ಅಸಂಜ್ಞೇಯ ಪ್ರಕರಣ (ಎನ್‌ಸಿ) ದಾಖಲಿಸಲಾಗಿತ್ತು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250