ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ರೌಡಿಶೀಟರ್ ಗಡಿಪಾರು!

Pakka News Web • 24 ಜೂನ್ 2026,

ಹಳಿಯಾಳದಲ್ಲಿ ಸಾರ್ವಜನಿಕ ಶಾಂತಿ, ನೆಮ್ಮದಿಗೆ ಭಂಗ ತರುತ್ತಾ ಸರಣಿ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ  ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯ ನಿವಾಸಿ ಮಂಜುನಾಥ ಹನುಮಂತ ಕೋಳಿಪುಚ್ಚನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಗಡಿಪಾರು ಮಾಡಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಂಜುನಾಥ ಕೋಳಿಪುಚ್ಚ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ 2010 ರಿಂದ 2026 ರವರೆಗೆ ಒಟ್ಟು 10 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 5 ಪ್ರಕರಣಗಳಲ್ಲಿ ಈತನಿಗೆ ಶಿಕ್ಷೆಯಾಗಿದ್ದು, 2 ಪ್ರಕರಣಗಳಲ್ಲಿ ಬಿಡುಗಡೆಯಾಗಿದ್ದಾನೆ. ಇನ್ನುಳಿದ 3 ಪ್ರಕರಣಗಳು ಸದ್ಯ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ.

ಈತನ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಳಿಯಾಳ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆದು ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸಲಾಗಿತ್ತು. ಆದರೂ ಈತ ತನ್ನ ಅಪರಾಧಿಕ ಕೃತ್ಯಗಳನ್ನು ಮುಂದುವರಿಸಿಕೊAಡು ಬಂದಿದ್ದನು. ಮುಂದಿನ ದಿನಗಳಲ್ಲಿ ಈತನಿಂದ ಸಾರ್ವಜನಿಕರ ಆಸ್ತಿಪಾಸ್ತಿಗೆ, ಕಾನೂನು ಸುವ್ಯವಸ್ಥೆಗೆ ಹಾಗೂ ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ, ಹಳಿಯಾಳ ಪೊಲೀಸ್ ಉಪನಿರೀಕ್ಷಕರು ಈತನನ್ನು ಗಡಿಪಾರು ಮಾಡುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವಿವರವಾದ ಪ್ರಸ್ತಾವನೆ ಸಲ್ಲಿಸಿದ್ದರು.

ಈ ಪ್ರಸ್ತಾವನೆಯನ್ನು ಸ್ವೀಕರಿಸಿ ಸಮಗ್ರ ವಿಚಾರಣೆ ನಡೆಸಿದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು, ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಗಡಿಪಾರು ಅನಿವಾರ್ಯ ಎಂದು ಪರಿಗಣಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಮಂಜುನಾಥ ಕೋಳಿಪುಚ್ಚನನ್ನು ಜೂನ್ 6ರಿಂದ ಅನ್ವಯವಾಗುವಂತೆ ದಿನಾಂಕ: 05-12-2026ರ ವರೆಗೆ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಹಾಸನ ಜಿಲ್ಲೆಯ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಹಿನ್ನೆಲೆಯಲ್ಲಿ ಹಳಿಯಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಆರೋಪಿ ಮಂಜುನಾಥ ಕೋಳಿಪುಚ್ಚನನ್ನು ಹಾಸನ ಜಿಲ್ಲೆಗೆ ಕರೆದೊಯ್ದು, ಅಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250