ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

International

ಮುರ್ಡೇಶ್ವರ ಅದೃಷ್ಟ ಡ್ರಾ: ವಂಚಕ ಪೊಲೀಸ್ ಬಲೆಗೆ!

Pakka News Web • 16 ಜುಲೈ 2026,

ಮುರ್ಡೇಶ್ವರ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ‘ಮುರ್ಡೇಶ್ವರ ಅದೃಷ್ಟ ಡ್ರಾ’ ನಡೆಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು  ಪೊಲೀಸರು ಒಂದು ವರ್ಷದ ಸತತ ಕಾರ್ಯಾಚರಣೆಯ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ‘ಮುರ್ಡೇಶ್ವರ ಅದೃಷ್ಟ ಡ್ರಾ’ ಎಂಬ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ದೇವಸ್ಥಾನದ ಚಿತ್ರಗಳನ್ನು ಬಳಸಿ ಆಕರ್ಷಕ ಜಾಹೀರಾತುಗಳನ್ನು ಹರಿಬಿಡುತ್ತಿದ್ದ. ಲಕ್ಕಿ ಡ್ರಾ ಹೆಸರಿನಲ್ಲಿ ನಕಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಿ ಸಾರ್ವಜನಿಕರನ್ನು ನಂಬಿಸಿ ಹಣ ಪಡೆದು ವಂಚನೆ ನಡೆಸುತ್ತಿದ್ದ ಎನ್ನಲಾಗಿದೆ.

ಈ ವಂಚನೆ ಬೆಳಕಿಗೆ ಬಂದ ಬಳಿಕ ಮುರ್ಡೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ವ್ಯವಸ್ಥಾಪಕ ಮಂಜುನಾಥ ಮದನ ಶೆಟ್ಟಿ ಅವರು 2025ರ ಆಗಸ್ಟ್‌ 6ರಂದು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಬಿಎನ್‌ಎಸ್-2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ, ಕಳೆದ ಒಂದು ವರ್ಷದಿಂದ ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಬೀದರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಆರೋಪಿಯ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಿತ್ತು. ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದಲ್ಲಿ ಜುಲೈ 16ರಂದು ಕಾರ್ಯಾಚರಣೆ ನಡೆಸಿ, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಲಖನಗಾಂವ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (32) ಎಂಬಾತನನ್ನು ಬಂಧಿಸಲಾಗಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎನ್.ಎಂ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ, ಭಟ್ಕಳ ಉಪವಿಭಾಗದ ಡಿವೈಎಸ್ಪಿ ಬಿ. ಗಿರೀಶ್ ಹಾಗೂ ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ್ ಹಂಚನಾಳ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದ್ದು, ಪಿಎಸ್ಐಗಳಾದ ಹಣಮಂತ ಬಿರಾದಾರ, ಲೋಕನಾಥ ರಾಠೋಡ್ ಹಾಗೂ ಪೊಲೀಸ್ ಸಿಬ್ಬಂದಿಯ ತಂಡ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250