ಕಾರವಾರ:ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಹಾಗೂ ಶಾಸಕ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿ.ವೈ. ರಾಘವೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಸಹಕಾರಿ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಿಸುತ್ತಿದ್ದ ಲಾರಿಗಳನ್ನು ತಡೆಹಿಡಿಯುತ್ತಿರುವ ಘಟನೆಗಳಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಅಡಿಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಮತ್ತು ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರವನ್ನು ಸಭೆಯಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರಲಾಯಿತು. ಈ ತಡೆ ಕ್ರಮದಿಂದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರಕ್ಕೂ ಧಕ್ಕೆಯಾಗಿದೆ ಎಂಬ ಆತಂಕವನ್ನು ಪ್ರತಿನಿಧಿಗಳು ವ್ಯಕ್ತಪಡಿಸಿದರು.
ವಿಷಯದ ಗಂಭೀರತೆಯನ್ನು ಮನಗಂಡ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸೂಕ್ತ ದಾಖಲೆಗಳೊಂದಿಗೆ ಸಾಗುವ ಅಡಿಕೆ ವಾಹನಗಳಿಗೆ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅಡಿಕೆ ಬೆಳೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಅನೇಕ ರೈತ ಕುಟುಂಬಗಳ ಆರ್ಥಿಕ ಜೀವನಾಡಿಯಾಗಿದ್ದು, ಬೆಳೆಗಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮತ್ತು ಪ್ರಯತ್ನಗಳು ಮುಂದುವರಿಯಲಿವೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
