ಬೆಂಗಳೂರು: ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ವೇದಿಕೆಯನ್ನು ಶುದ್ಧೀಕರಿಸಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ವೇದಿಕೆಯನ್ನು ಶುದ್ಧೀಕರಿಸಿರುವುದು ಜಾತಿ ಆಧಾರಿತ ಅವಮಾನಕಾರಿ ಕೃತ್ಯ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಘಟನೆಗೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮವನ್ನೂ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿತು.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಹನೀಫ್ ಖುರೇಶಿ (ಅಲಿ), ಜಾತಿ ಮತ್ತು ಧರ್ಮದ ಆಧಾರದ ಮೇಲೆ ಯಾರನ್ನೂ ಅವಮಾನಿಸುವುದನ್ನು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ. ಈ ಅನ್ಯಾಯದ ವಿರುದ್ಧ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ನಿರಂತರವಾಗಿ ಧ್ವನಿ ಎತ್ತಲಿದೆ ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಹನೀಫ್ ಖುರೇಶಿ (ಅಲಿ) ನೇತೃತ್ವದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಗಮನ ಸೆಳೆಯಿತು.
