ರೇಷನ್ ಕಾರ್ಡ್ಗೆ ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡಿಸಲು ಸರ್ವರ್ ಸಮಸ್ಯೆಯಿಂದ ಕಚೇರಿಗಳಿಗೆ ಅಲೆದಾಡಬೇಕಿದ್ದ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಹಾರ ಇಲಾಖೆ ‘ಅನ್ನಸೇವೆ’ ಎಂಬ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದೆ. ಈ ಆ್ಯಪ್ ಮೂಲಕ ಯುಐಡಿಎಐನ ಫೇಸ್ ಆಥಂಟಿಕೇಷನ್ ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗಳು ತಮ್ಮ ಮನೆಯಲ್ಲೇ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.
ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ರಾಜೀವ್ ಗಾಂಧಿ ಕಾಲನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹಾರ ಸಚಿವ ರಿಜ್ವಾನ್ ಅರ್ಷದ್ ‘ಅನ್ನಸೇವೆ’ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಇ-ಆಡಳಿತ ಇಲಾಖೆ, ಎನ್ಐಸಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ರಾಜ್ಯ ಆಹಾರ ಇಲಾಖೆ ಈ ಅಪ್ಲಿಕೇಷನ್ ರೂಪಿಸಿದೆ.
ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆಯ ನಿಯಮದಂತೆ ರೇಷನ್ ಕಾರ್ಡ್ನಲ್ಲಿರುವ ಫಲಾನುಭವಿಗಳು ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ. ರಾಜ್ಯದಲ್ಲಿ ಬೋಗಸ್ ರೇಷನ್ ಕಾರ್ಡ್ಗಳನ್ನು ಪತ್ತೆಹಚ್ಚುವುದು ಹಾಗೂ ಪಡಿತರ ಸೋರಿಕೆಯನ್ನು ತಡೆಯುವ ಉದ್ದೇಶದಿಂದ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇದರ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಲಾಗಿದೆ.
ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ‘ಅನ್ನಸೇವೆ’ ಆ್ಯಪ್ ಸೇವೆ ಲಭ್ಯವಾಗಲಿದೆ.
ಆ್ಯಪ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಫಲಾನುಭವಿಗಳು ಗೂಗಲ್ ಪ್ಲೇ ಸ್ಟೋರ್ನಿಂದ ‘CEG Face KYC’, ‘AadhaarFaceRD’ ಹಾಗೂ ‘ಅನ್ನಸೇವೆ’ ಎಂಬ ಮೂರು ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಬಳಿಕ ಫೇಸ್ ಆಥಂಟಿಕೇಷನ್ ತಂತ್ರಜ್ಞಾನದ ಮೂಲಕ ಆಧಾರ್ ದೃಢೀಕರಣ ಪೂರ್ಣಗೊಳಿಸಬಹುದಾಗಿದೆ.
ರಾಜ್ಯದಲ್ಲಿ ಒಟ್ಟು 2,67,64,276 ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳಬೇಕಿದ್ದು, ಸೆಪ್ಟೆಂಬರ್ 29ರವರೆಗೆ 1,56,21,608 ಮಂದಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಇನ್ನೂ ರಾಜ್ಯದಲ್ಲಿ ಇದುವರೆಗೆ ಒಮ್ಮೆಯೂ ಇ-ಕೆವೈಸಿ ಮಾಡಿಸಿಕೊಳ್ಳದ 3,82,362 ಸದಸ್ಯರು ತಕ್ಷಣ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
