ಕಾರವಾರ: ಕಾಳಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳನ್ನು ತಹಸೀಲ್ದಾರ್ ನಿಶ್ಚಲ್ ನಾರೋನಾ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಸುಮಾರು 3೦೦ ಮೆಟ್ರಿಕ್ ಟನ್ ವಶಪಡಿಸಿಕೊಂಡಿದೆ.
ಕಿನ್ನರದಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಿಜಯ ಎಂಬವರು ಕಾಳಿ ನದಿಯಿಂದ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಿ ಸಾಗಾಟ ಮಾಡಲಾಗುತ್ತಿದೆ. ಅಲ್ಲದೆ ಮರಳನ್ನು ಅಂತರರಾಜ್ಯವಾಗಿ ಗೋವಾಕ್ಕೆ ಸಾಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರಿಗೆ ದೂರು ಸಲ್ಲಿಸಿದ್ದರು.

ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದೆ ಅಕ್ರಮ ಮರಳು ದಂಧೆಗೆ ಅವಕಾಶ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು. ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಹಿತಿ ನೀಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ ಎಂದೂ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು.
ದೂರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಹಸೀಲ್ದಾರ್ ನಿಶ್ಚಲ್ ನಾರೋನಾ ಅವರಿಗೆ ಅಕ್ರಮ ಮರಳು ಗಣಿಗಾರಿಕೆ ಹಾಗೂ ದಾಸ್ತಾನು ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದರಂತೆ ತಹಸೀಲ್ದಾರ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಚಿತ್ತಾಕುಲ ಪೊಲೀಸ್ ಠಾಣೆ ಸಮೀಪದ ಕಾಳಿ ನದಿ ತೀರದಲ್ಲಿರುವ ತಾರೀವಾಡ, ಸವಾರ ಪೈ, ಹೋಟೆಗಾಳಿ, ಹಳಗೆಜುಗ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.

ಕಾರ್ಯಾಚರಣೆ ವೇಳೆ ವಿವಿಧೆಡೆ ದಾಸ್ತಾನು ಮಾಡಲಾಗಿದ್ದ ಅಪಾರ ಪ್ರಮಾಣದ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಮರಳು ದಾಸ್ತಾನು ಮಾಡಿದ್ದ ಸ್ಥಳದ ಪಕ್ಕದಲ್ಲಿದ್ದ ಮರಳು ಖಾಲಿ ಮಾಡಲು ಬಳಸುತ್ತಿದ್ದ ಕ್ರೇನ್ನ್ನು ಕೂಡ ಅಧಿಕಾರಿಗಳು ಗಮನಕ್ಕೆ ತೆಗೆದುಕೊಂಡಿದ್ದು, ದಾಸ್ತಾನು ಮಾಡಲಾಗಿದ್ದ ಜಾಗ ಹಾಗೂ ಕ್ರೇನ್ ಯಾರಿಗೆ ಸೇರಿದ್ದು ಎಂಬುದರ ಕುರಿತು ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.
ರವಿವಾರವಾಗಿದ್ದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ರಜೆ ಇದ್ದುದರಿಂದ ಅಂದು ಅಕ್ರಮ ಮರಳಿನ ದಾಸ್ತಾನು ಪ್ರಮಾಣ ಕಡಿಮೆಯಾಗಿತ್ತು. ಸಾಮಾನ್ಯ ದಿನಗಳಲ್ಲಿ ಇದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ದಾಸ್ತಾನು ಮಾಡಿ ಗೋವಾಕ್ಕೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಸಾರ್ವಜನಿಕರಿಂದ ಕೇಳಿಬಂದಿದೆ. ಕಾಳಿ ಸೇತುವೆಯಿಂದಲೇ ಈ ಚಟುವಟಿಕೆಗಳು ಗೋಚರಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಈವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಇದೇ ವೇಳೆ ದೀರ್ಘಕಾಲದಿಂದ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳು ದಂಧೆಯ ವಿರುದ್ಧ ತಹಸೀಲ್ದಾರ್ ನಿಶ್ಚಲ್ ನಾರೋನಾ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗೆ ಸ್ಥಳೀಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
