ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Trending

ಒತ್ತಡ ಬೇಡವೇ? ಯೋಗ ಮಾಡಿ 

Pakka News Web • 21 ಜೂನ್ 2026,

ಕಾರವಾರ:ಆಧುನಿಕ ತಂತ್ರಜ್ಞಾನ ಹಾಗೂ ಬದಲಾದ ಜೀವನಶೈಲಿಯಿಂದಾಗಿ ದೈಹಿಕ ಶ್ರಮ ಕಡಿಮೆಯಾಗುತ್ತಿದ್ದು, ಮಕ್ಕಳಲ್ಲಿ ತೀವ್ರ ಒತ್ತಡ, ಖಿನ್ನತೆಯಂತಹ ನಕಾರಾತ್ಮಕ ಪ್ರವೃತ್ತಿಗಳು ಹೆಚ್ಚುತ್ತಿವೆ. ಇವುಗಳಿಗೆ ಕಡಿವಾಣ ಹಾಕಿ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆ ಮೂಡಿಸಲು ಪ್ರತಿದಿನ ಯೋಗಾಭ್ಯಾಸ ಮಾಡುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದರು.

ಕಾರವಾರ ನಗರದ ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಭಾರತವು ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆಯಾಗಿದ್ದು, ಒತ್ತಡ ರಹಿತ ಹಾಗೂ ಆರೋಗ್ಯಪೂರ್ಣ ಜೀವನಕ್ಕಾಗಿ ಪ್ರತಿಯೊಬ್ಬರೂ ಪ್ರತಿದಿನ ತಮಗಾಗಿ ಸ್ವಲ್ಪ ಸಮಯ ಮೀಸಲಿಡಬೇಕು ಎಂದರು. ಈ ಬಾರಿಯ ಧ್ಯೇಯವಾಕ್ಯವಾದ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಪ್ರಸ್ತುತ ದಿನಗಳಿಗೆ ಹೆಚ್ಚು ಸೂಕ್ತವಾಗಿದ್ದು, ವಯಸ್ಸಿನ ಮಿತಿಯಿಲ್ಲದೆ ಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜೂನ್ 30ರಿಂದ ಆರಂಭವಾಗಲಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು ಮತ್ತು ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವಜನತೆ ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ, ಭಾರತ ಮತ್ತು ಜಪಾನ್ ಸರ್ಕಾರದ ‘ಸಕುರಾ ಸ್ಟೂಡೆಂಟ್ ಎಕ್ಸ್‌ಚೇಂಜ್’ ಕಾರ್ಯಕ್ರಮದಡಿ ಜಪಾನ್ ಪ್ರವಾಸ ಕೈಗೊಂಡಿದ್ದ ಪ್ರತಿಭಾವಂತ ವಿದ್ಯಾರ್ಥಿ ಆಕಾಶ್ ಹರಿಕಂತ್ರ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಬಳಿಕ ನಡೆದ ಸಾಮೂಹಿಕ ಯೋಗಾಭ್ಯಾಸ, ಪ್ರಾಣಾಯಾಮ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಧ್ಯಾನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ನಡೆದ ಯೋಗ ನೃತ್ಯ ಪ್ರದರ್ಶನ ಗಮನ ಸೆಳೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ವೇಳೆ ಬಹುಮಾನ ವಿತರಿಸಲಾಯಿತು.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250