ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಬಿರುಗಾಳಿ–ಮಳೆಗೆ ಧರೆಗುರುಳಿದ ಬೃಹತ್ ಮರ: ತಪ್ಪಿದ ದುರಂತ

Pakka News Web • 5 ಜುಲೈ 2026,

ಕಾರವಾರ ನಗರದಲ್ಲಿ ರವಿವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕೋಡಿಭಾಗದ ಅಲ್ವೇವಾಡ ಪೋರ್ಟ್ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿದೆ.

ಮರ ಬಿದ್ದ ರಭಸಕ್ಕೆ ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಒಂದು ಆಟೋ ರಿಕ್ಷಾ ಹಾಗೂ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆ ನಡೆದ ಸಂದರ್ಭದಲ್ಲಿ ಮರದ ಕೆಳಗೆ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸದೆ ಸಾರ್ವಜನಿಕರು ದೊಡ್ಡ ಕಂಟಕದಿಂದ ಪಾರಾಗಿದ್ದಾರೆ.

ರಸ್ತೆಯ ಮಧ್ಯಭಾಗಕ್ಕೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಈ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳು ಸಹ ಕೈಜೋಡಿಸಿ ಸಿಬ್ಬಂದಿಗೆ ನೆರವಾದರು.

ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ನರೋನಾ ಅವರು ಹಾನಿಯ ತೀವ್ರತೆಯನ್ನು ಪರಿಶೀಲಿಸಿದರು. ಇದೇ ವೇಳೆ ಸಂಚಾರಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ, ವಾಹನ ಸಂಚಾರವನ್ನು ನಿಯಂತ್ರಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಸ್ತುತ ದಿನಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಮುಂದುವರಿದಿರುವುದರಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳುವ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವಾಗ ಹಾಗೂ ಸಂಚರಿಸುವಾಗ ಹೆಚ್ಚಿನ ಜಾಗ್ರತೆ ವಹಿಸಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳು ಈ ಮೂಲಕ ಮನವಿ ಮಾಡಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250