ಕಾರವಾರ: ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಮುಂದಿನ 24 ಗಂಟೆಗಳ ಕಾಲ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ್ ಜಾರಿ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಲಯದಂತಹ ಮಳೆಯೊಂದಿಗೆ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಲಕ್ಷಣಗಳಿರುವುದರಿಂದ ‘ರೆಡ್ ಅಲರ್ಟ್’ ಜಾರಿಗೊಳಿಸಲಾಗಿದೆ.

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಮತ್ತೊಂದೆಡೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ಭೀತಿ ಎದುರಾಗಿದ್ದರೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಇದೆ. ಸಿಡಿಲು ಹಾಗೂ ಬಿರುಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಓಡಾಡದೆ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚನೆ ನೀಡಲಾಗಿದೆ.
