ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ: ಸೈಯದ್ ಅಶ್ರಫ್ ಖಾದ್ರಿ

Pakka News Web • 22 ಜುಲೈ 2026,

ಕಾರವಾರ: ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕ ಹಾಗೂ ಕಾರವಾರ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಶ್ರಫ್ ಖಾದ್ರಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ತಂದ ದಕ್ಕೆಯಾಗಿದೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ. ಆ ಹಕ್ಕನ್ನು ಗೌರವಿಸುವ ಬದಲು ದೌರ್ಜನ್ಯ ಎಸಗಿರುವುದು ಅತ್ಯಂತ ಖೇದಕರ. ಪ್ರಜಾಪ್ರಭುತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಸಂವಾದ ಮತ್ತು ಸಂವಿಧಾನಬದ್ಧ ಮಾರ್ಗಗಳ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ಆಗಮಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವು ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಪಕ್ಷವು ಇದನ್ನು ‘ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಯತ್ನ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸುವ ಬದಲು, ಕೇಂದ್ರ ಸರ್ಕಾರವು ಅವರ ಬೇಡಿಕೆಗಳನ್ನು ಆಲಿಸಿ ಸೌಹಾರ್ದಯುತವಾಗಿ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ತೋರಬೇಕಿತ್ತು.
ಈ ಸಂಪೂರ್ಣ ಘಟನೆಯ ಬಗ್ಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತರುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಇಂತಹ ಅಪ್ರಜಾಸತ್ತಾತ್ಮಕ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಎಚ್ಚರ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250