ಕಾರವಾರ: ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆನ್ನಲಾದ ಘಟನೆಯನ್ನು ಮಹಿಳಾ ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷೆ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ದಿಲ್ಶಾದ್ ಕುಟ್ಟಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ತಂದ ದಕ್ಕೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ನೀಡಿದ್ದು, ಆ ಹಕ್ಕನ್ನು ಗೌರವಿಸುವ ಬದಲು ದೌರ್ಜನ್ಯ ಎಸಗಿರುವುದು ಖೇದಕರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಸಂವಾದ ಮತ್ತು ಸಂವಿಧಾನಬದ್ಧ ಮಾರ್ಗಗಳ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ಇದೇ ವೇಳೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ಆಗಮಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವು ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಪಕ್ಷವು ಇದನ್ನು ‘ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಯತ್ನ’ ಎಂದು ಬಣ್ಣಿಸಿದ್ದು, ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸುವ ಬದಲು ಕೇಂದ್ರ ಸರ್ಕಾರವು ಅವರ ಬೇಡಿಕೆಗಳನ್ನು ಆಲಿಸಿ ಸೌಹಾರ್ದಯುತವಾಗಿ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ತೋರಬೇಕಿತ್ತು ಎಂದು ದಿಲ್ಶಾದ್ ಕುಟ್ಟಿ ಹೇಳಿದ್ದಾರೆ.
ಈ ಸಂಪೂರ್ಣ ಘಟನೆಯ ಕುರಿತು ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತರುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಎಚ್ಚರ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
