ಕಾರವಾರ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸೇರಿದಂತೆ ದೇಶದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಬಲಪ್ರಯೋಗ ಮತ್ತು ದೌರ್ಜನ್ಯವನ್ನು ಕಾರವಾರ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಕಲ್ಗುಟ್ಕರ್ ಹಾಗೂ ಉಪಾಧ್ಯಕ್ಷ ಬಾಬು ಶೇಕ್ ಅವರು ಜಂಟಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಯನ್ನು ತೀವ್ರವಾಗಿ ತೊಳಚಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು, ಭ್ರಷ್ಟಾಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಈ ಅಕ್ರಮಗಳ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ಯುವ ಮತ್ತು ವಿದ್ಯಾರ್ಥಿ ಒಕ್ಕೂಟಗಳು ದೆಹಲಿಯ ಜಂತರ್ ಮಂತರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಶಾಂತಿಯುತ ಪ್ರತಿಭಟನಾ ಮೆರವಣಿಗೆಯು ಸಂಸತ್ ಭವನದತ್ತ ಸಾಗುತ್ತಿದ್ದಾಗ, ದೆಹಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ತಡೆದಿದ್ದಲ್ಲದೆ, ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿ ದೌರ್ಜನ್ಯ ಎಸಗಿದ್ದಾರೆ.
ಪೋಲಿಸರ ಈ ಹಠಾತ್ ಬಲಪ್ರಯೋಗದಿಂದಾಗಿ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ (RML) ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳನ್ನು ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಹಾಗೂ ಕೇಂದ್ರ ಸರ್ಕಾರದ ಮೌನವನ್ನು ಖಂಡಿಸಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ‘INDIA’ ಮೈತ್ರಿಕೂಟದ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ (ಲೋಕ ಕಲ್ಯಾಣ್ ಮಾರ್ಗ) ಧರಣಿ ನಡೆಸಿದರು. ಈ ವೇಳೆ ದೆಹಲಿ ಪೊಲೀಸರು ಪ್ರಮುಖ ನಾಯಕರನ್ನು ಬಲವಂತವಾಗಿ ವಶಕ್ಕೆ ಪಡೆದು, ಛತ್ರಸಾಲ್ ಕ್ರೀಡಾಂಗಣ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧನದಲ್ಲಿರಿಸಿ ನಂತರ ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿಯವರು, ವಿದ್ಯಾರ್ಥಿಗಳ ಮೇಲೆ ದಾಳಿ ಎಂದರೆ ಅದು ದೇಶದ ಪ್ರತಿಯೊಂದು ಕುಟುಂಬದ ಮೇಲಿನ ದಾಳಿ. ಶಾಂತಿಯುತ ಪ್ರತಿಭಟನೆ ಪ್ರಜಾಸತ್ತಾತ್ಮಕ ಹಕ್ಕು. ಅಧಿಕಾರ ಶಾಶ್ವತವಲ್ಲ, ನಿಯಮ ಮೀರಿ ನಡೆದುಕೊಂಡ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯು ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ದೇಶದ ಭವಿಷ್ಯವಾಗಿರುವ ಯುವಜನರ ಧ್ವನಿಯನ್ನು ಅಡಗಿಸಲು ಹೊರಟಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಕಾರವಾರ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಅರವಿಂದ್ ಕಲ್ಗುಟ್ಕರ್ ಹಾಗೂ ಬಾಬು ಶೇಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
