ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರವು ಜಿಲ್ಲೆಯಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಕಾರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.

ಇಲ್ಲಿನ ಮಿತ್ರ ಸಮಾಜ ಮೈದಾನದಿಂದ ಆರಂಭಗೊಂಡ ಬೃಹತ್ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸರ್ಕಾರದ ಆಡಳಿತ ವೈಖರಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಸಾರ್ವಜನಿಕರ ಬದುಕು ದುಸ್ತರವಾಗಿದೆ. ರಾಜ್ಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಗ್ರಾಮೀಣ ರಸ್ತೆಗಳು ಸಂಪೂರ್ಣವಾಗಿ ಹೊಂಡಮಯವಾಗಿದ್ದು, ಸಂಚಾರ ಕಷ್ಟಕರವಾಗಿದೆ. ಪರಿಣಾಮವಾಗಿ ಬಸ್ಗಳು ಸರಿಯಾದ ಸಮಯಕ್ಕೆ ತಲುಪದೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡುವಂತಾಗಿದೆ.
ಸೋರುತ್ತಿರುವ ಬಸ್ಗಳು ಮತ್ತು ಸಮರ್ಪಕ ರಸ್ತೆಗಳಿಲ್ಲದೆ ಸಾರಿಗೆ ವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಇಂತಹ ಸ್ಥಿತಿಯಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ನೀಡಿ ಏನು ಪ್ರಯೋಜನ ಎಂದು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ದಿನಕ್ಕೆ ಹತ್ತಾರು ಬಾರಿ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ವಿದ್ಯುತ್ ಇಲ್ಲದಿದ್ದರೂ ಕೇಳುವವರಿಲ್ಲದಂತಾಗಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸಬೇಕಾದ ಲೈನ್ಮ್ಯಾನ್ಗಳನ್ನು ಗೃಹಜ್ಯೋತಿ ಯೋಜನೆಯ ದಾಖಲೆ ಸಂಗ್ರಹಿಸಲು ನಿಯೋಜಿಸಲಾಗುತ್ತಿದೆ. ಸರ್ಕಾರ ಉಚಿತ ವಿದ್ಯುತ್ ಎಂದು ಬೆನ್ನು ತಟ್ಟಿಕೊಳ್ಳುತ್ತಿದ್ದರೂ, ಪ್ರಾಯೋಗಿಕವಾಗಿ ಜನರನ್ನು ಕತ್ತಲಲ್ಲಿ ತಳ್ಳಿದೆ ಎಂದು ವಾಗ್ದಾಳಿ ನಡೆಸಿದರು.
ಆರೋಗ್ಯ ಕ್ಷೇತ್ರದ ಲೋಪಗಳನ್ನು ಉಲ್ಲೇಖಿಸಿ, ನಗರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆಗೊಂಡಿದೆ ಎಂದು ಪ್ರಚಾರ ಪಡೆಯಲಾಗುತ್ತಿದೆಯೇ ವಿನಃ ಮೆಡಿಕಲ್ ಕಾಲೇಜಿಗೆ ಮಂಜೂರಾದ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ಬಡ ಜನತೆ ತುರ್ತು ಚಿಕಿತ್ಸೆಗೆ ಇಂದಿಗೂ ನೆರೆ ಜಿಲ್ಲೆಗಳನ್ನು ಅವಲಂಬಿಸಬೇಕಾಗಿದೆ ಎಂದು ವಿಷಾದಿಸಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಲಿ, ಆದರೆ ಅದನ್ನು ನೆಪವಾಗಿಸಿಕೊಂಡು ಮೂಲಭೂತ ಅಭಿವೃದ್ಧಿ ಸೌಲಭ್ಯಗಳಿಂದ ಜನರನ್ನು ವಂಚಿಸುವುದು ಸರಿಯಲ್ಲ. ಜನಸಾಮಾನ್ಯರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರ ತಕ್ಷಣವೇ ಎಚ್ಚೆತ್ತು ರಸ್ತೆ, ವಿದ್ಯುತ್, ಸಾರಿಗೆ ಹಾಗೂ ಆರೋಗ್ಯ ಸೇವೆಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಇನ್ನಷ್ಟು ಉಗ್ರ ಸ್ವರೂಪದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಸಂಜಯ್ ಸಾಳುಂಕೆ, ಜಗದೀಶ ನಾಯಕ ಮೊಗಟಾ, ರಾಜೇಂದ್ರ ನಾಯ್ಕ, ಕಿಶನ್ ಕಾಂಬಳೆ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
