ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ರವಿವಾರ ಕಾರವಾರ ಮತ್ತು ಅಂಕೋಲಾದಲ್ಲಿ ಜರುಗಿದ ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಒಟ್ಟು 6,475 ಅಭ್ಯರ್ಥಿಗಳಲ್ಲಿ 5,783 ಮಂದಿ ಹಾಜರಾಗಿದ್ದು, 692 ಅಭ್ಯರ್ಥಿಗಳು ಗೈರುಹಾಜರಾಗಿದ್ದರು. ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ, ಜಿಲ್ಲೆಯಲ್ಲಿ ಸುಗಮ ಹಾಗೂ ಶಾಂತಿಯುತವಾಗಿ ನೆರವೇರಿತು.
ಕಾರವಾರದಲ್ಲಿ 15 ಹಾಗೂ ಅಂಕೋಲಾದಲ್ಲಿ 5 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹಾಗೂ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ, ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು, ಅಭ್ಯರ್ಥಿಗಳಿಗೆ ಒದಗಿಸಿರುವ ಸೌಲಭ್ಯಗಳು ಮತ್ತು ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಹಾಗೂ ಮೊಬೈಲ್ ಜಾಮರ್ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ, ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು.
ಜೊತೆಗೆ ಪರೀಕ್ಷಾ ಕೇಂದ್ರಗಳ ಸುತ್ತ ಹಾಗೂ ಮಾರ್ಗಾಧಿಕಾರಿಗಳ ತಂಡಕ್ಕೆ ಅಗತ್ಯ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿತ್ತು. ಒಟ್ಟಿನಲ್ಲಿ, ಪರೀಕ್ಷಾ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಈ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲಾಯಿತು.
