ಕಾರವಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ, ಬಿಜೆಪಿಯ ಭಟ್ಕಳ ಹಾಗೂ ಮಂಕಿ ಮಂಡಲಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಸತ್ಯಾಗ್ರಹ ನಡೆಯಿತು. ಈ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯು ಸತತ ಐದನೇ ದಿನಕ್ಕೆ ಕಾಲಿಟ್ಟಿದೆ.
ಧರಣಿನಿರತರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ನೇರ ಕಾರಣರಾದ ಸಚಿವರು ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕು ಹೊಂದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ ಶಿವಾನಂದ ನಾಯ್ಕ್ ಎಚ್ಚರಿಕೆ ನೀಡಿ, ಸಚಿವರ ರಾಜೀನಾಮೆ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಮಂಡಲ ಮಟ್ಟದಲ್ಲೂ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದರು.
ಈ ಪ್ರತಿಭಟನೆಯಲ್ಲಿ ಪಶ್ಚಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ್, ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಡಿಗ, ಶ್ರೀಕಾಂತ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ್, ಮುಖಂಡರಾದ ರಾಜು ಭಂಡಾರಿ, ಕಿಶನ್ ಕಾಂಬಳೆ, ನಾಗೇಶ್ ಕುರ್ಡೇಕರ್, ಸುಭಾಷ್ ಗುನಗಿ, ನಗರಸಭೆ ಮಾಜಿ ಅಧ್ಯಕ್ಷ ಕವಿರಾಜ ಅಂಕೋಲೆಕರ್, ಭಟ್ಕಳ ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯ್ಕ್, ಮಂಕಿ ಮಂಡಲದ ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಹೆಗಡೆ, ಗಣಪತಿ ಗೌಡ ಸೇರಿದಂತೆ ಜಿಲ್ಲಾ-ಮಂಡಲಗಳ ಹಲವು ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
