ಕಾರವಾರ:ಭ್ರಷ್ಟಾಚಾರಕ್ಕೆ ಕಾರಣರಾಗಿರುವ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ದಿನಕರ ಶೆಟ್ಟಿ ಉಪಸ್ಥಿತಿಯಲ್ಲಿ ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಧರಣಿ ನಡೆಯಿತು.
ಈ ಸರಣಿ ಹೋರಾಟದಲ್ಲಿ ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ (ಕುಮಟಾ ಮಂಡಲ, ಹೊನ್ನಾವರ ಮಂಡಲ, ಗೋಕರ್ಣ ಮಂಡಲ) ಆಗಮಿಸಿದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು.

ಕ್ಷೇತ್ರದ ಶಾಸಕರಾದ ದಿನಕರ್ ಶೆಟ್ಟಿ ಮಾತನಾಡಿ, ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಭಾರಿ ಆವ್ಯವಹಾರ ನಡೆದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ಅವ್ಯವಹಾರಕ್ಕೆ ಕಾರಣರಾದ ಸಚಿವ ನಾಗೇಂದ್ರ ಆಗ ಬಿಜೆಪಿಯ ಹೋರಾಟದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿದ್ದು ದುರದೃಷ್ಟಕರ ಸಂಗತಿ. ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದರು.
ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆಸಿದ ನಾಗೇಂದ್ರ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ವಕೀಲರಾದ ನಾಗರಾಜ ನಾಯಕ ಮಾತನಾಡಿ ಪರಿಶಿಷ್ಟ ಜನಾಂಗಕ್ಕೆ ಮೀಸಲಾದ ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಗಜಾನನ ಗುನಗಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ಸ್ವಾಗತಿಸಿದರು.
ಜಿಲ್ಲಾ ಉಪಾಧ್ಯಕ್ಷ ಸುಬ್ರಾಯ ವಾಳ್ಕೆ, ಜಿಲ್ಲಾ ಕಾರ್ಯದರ್ಶಿ ಕಮಲಾ ನಾಯ್ಕ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಗೀತಾ ಶಿಕಾರಿಪುರ, ಸುಜಾತ ಬಾದೇಕರ್, ಕುಮಟಾ ಮಂಡಲ ಅಧ್ಯಕ್ಷರಾದ ಜಿ. ಐ .ಹೆಗಡೆ, ಹೊನ್ನಾವರ ಮಂಡಲ ಅಧ್ಯಕ್ಷರಾದ ಯೋಗೇಶ್ ಮೇಸ್ತ, ಗೋಕರ್ಣ ಮಂಡಲ ಅಧ್ಯಕ್ಷರಾದ ಗಣೇಶ ಪಂಡಿತ್, ರಾಜ್ಯ ಶಿಕ್ಷಣ ಪ್ರಕೋಸ್ಟ ಸಹ ಸಂಚಾಲಕರಾದ ಎಂ ಜಿ ಭಟ್, ರಾಜ್ಯ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ಸದಸ್ಯರಾದ ಮಂಜುನಾಥ ಜನ್ನು,ಹೊನ್ನಾವರ ಮಂಡಲ ನಿಕಟಪೂರ್ವ ಅಧ್ಯಕ್ಷರಾದ ರಾಜು ಭಂಡಾರಿ ಕಾರ್ಯಕ್ರಮ ನಿರೂಪಿಸಿದರು, ಮಾಧ್ಯಮ ಸಹ ಸಹ ಸಂಚಾಲಕ ಕಿಶನ್ ಕಾಂಬಳೆ, ಕುಮಟಾ ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಹೇಮಂತ್ ಕುಮಾರ್ ಗಾಂವ್ಕರ್, ಗಜಾನನ ಪೈ, ಮಹೇಶ ದೇಶಭಂಡಾರಿ, ದೇವು ಗೌಡ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
