ಕಾರವಾರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಚುರುಕುಗೊಂಡಿದ್ದು, ‘ನೋ ಮ್ಯಾಪಿಂಗ್’ ಹಾಗೂ ‘ತಾರ್ಕಿಕ ವ್ಯತ್ಯಾಸ’ ಕಂಡುಬಂದಿರುವ ಒಟ್ಟು 65,330 ಮತದಾರರಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೊದಲ ಹಂತದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಒಟ್ಟು 12,30,037 ಮತದಾರರ ಪೈಕಿ ಶೇಕಡ 91.3 ರಷ್ಟು ಎನ್ಯೂಮರೇಷನ್ ಫಾರ್ಮ್ಗಳನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸಲಾಗಿದೆ. ಗೈರುಹಾಜರಿ, ಸ್ಥಳಾಂತರ ಅಥವಾ ಮೃತಪಟ್ಟ 1,07,015 ಮತದಾರರನ್ನು ಹೊರತುಪಡಿಸಿ ಉಳಿದವರ ಹೆಸರುಗಳನ್ನೊಳಗೊಂಡ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.
ಇದೀಗ ತಾಂತ್ರಿಕ ಹಾಗೂ ತಾರ್ಕಿಕ ವ್ಯತ್ಯಾಸವಿರುವ 65,330 ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಮತದಾರರ ಮನೆ ಬಾಗಿಲಿಗೆ ತೆರಳಿ ನೇರವಾಗಿ ನೋಟಿಸ್ ತಲುಪಿಸುವ ಕಾರ್ಯ ನಡೆಸಲಿದ್ದಾರೆ ಎಂದು ವಿವರಿಸಿದರು.
ನೋಟಿಸ್ ಪಡೆದ ಮತದಾರರು ಅದರಲ್ಲಿ ನಮೂದಿಸಿರುವ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ಚುನಾವಣಾ ಆಯೋಗ ಸೂಚಿಸಿದ 12 ಮಾನ್ಯ ದಾಖಲೆಗಳೊಂದಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವುದು ಕಡ್ಡಾಯವಾಗಿದೆ. ಅನಿವಾರ್ಯ ಕಾರಣಗಳಿಂದ ಮೊದಲ ದಿನದಂದು ಹಾಜರಾಗಲು ಸಾಧ್ಯವಾಗದ ಮತದಾರರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗುತ್ತದೆ. ಇದರೊಂದಿಗೆ ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ ಹಾಗೂ ವಿಳಾಸ ಸ್ಥಳಾಂತರಕ್ಕೂ ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಸೆಪ್ಟೆಂಬರ್ 23ರೊಳಗೆ ನಿಗದಿತ ಅರ್ಜಿ ಸಲ್ಲಿಸಬಹುದಾಗಿದೆ.
ವಿಚಾರಣೆ ವೇಳೆ ಮತದಾರರು ನೀಡುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು 145 ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಯಾವುದೇ ಒಬ್ಬ ಅರ್ಹ ಮತದಾರರೂ ಪಟ್ಟಿಯಿಂದ ವಂಚಿತರಾಗದಂತೆ ಅತ್ಯಂತ ಪಾರದರ್ಶಕವಾಗಿ ಹಾಗೂ ಎಚ್ಚರಿಕೆಯಿಂದ ಈ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಹಾಗೂ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಉಪಸ್ಥಿತರಿದ್ದರು.
