ಕಾರವಾರ: ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಬುಧವಾರ ನಡೆದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಪಾಲ್ಗೊಂಡು ಜನವಿರೋಧಿಯಾದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಪಾದಯಾತ್ರೆಯ ನಡುವೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಬರದ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು ಅಭಿವೃದ್ಧಿ ವಿರೋಧಿಯಾದ ಈ ಸರ್ಕಾರ ತೊಲಗಲಿ ಎಂಬುದು ಜನರ ಅಪೇಕ್ಷೆಯಾಗಿದೆ ಎಂದು ಹೇಳಿದರು.

ಈ ಸರ್ಕಾರ ಭರವಸೆ ನೀಡಿದಂತೆ ಗ್ಯಾರಂಟಿಯನ್ನೂ ಸಕಾಲಕ್ಕೆ ನೀಡುತ್ತಿಲ್ಲ. ನಿರಂತರ ವಿದ್ಯುತ್ ಕಡಿತ, ಬಸ್ ಗಳ ಅವ್ಯವಸ್ಥೆ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನರು ಆಕ್ರೋಷಗೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಸಿ.ಟಿ. ರವಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉತ್ತರಕನ್ನಡ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಶಾಸಕರಾದ ಹರೀಶ್ ಪೂಂಜ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಗೌಡ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಿದ್ದರು.
ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಪಕ್ಷದ ಸಂಘಟನಾ ಶಕ್ತಿ ಪ್ರದರ್ಶಿಸಿದರು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರಮುಖರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಜ್ಯ ಮಟ್ಟದ ಪ್ರಮುಖ ನಾಯಕರೊಂದಿಗೆ ರೂಪಾಲಿ ಎಸ್. ನಾಯ್ಕ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ಗಮನ ಸೆಳೆಯಿತು.
ಬಿಜೆಪಿ ಮುಖಂಡರು, ಮಾಜಿ ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆದ ಪಾದಯಾತ್ರೆ ಪಕ್ಷದ ಸಂಘಟನಾ ಚಟುವಟಿಕೆಗೆ ಮತ್ತಷ್ಟು ವೇಗ ನೀಡುವ ಸಂದೇಶವನ್ನು ನೀಡಿತು.
